ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹತ್ತು ನಿಮಿಷಗಳ ಕಾಲ ಧ್ಯಾನ ಮತ್ತು ನೈತಿಕ ಶಿಕ್ಷಣ ನೀಡುವ ಕುರಿತು ಶೈಕ್ಷಣಿಕ ಕ್ಷೇತ್ರದಲ್ಲಿ ಅನುಭವ ಇರುವ ತಜ್ಞರಿಂದ ವರದಿ ಪಡೆಯುವ ನಿಟ್ಟಿನಲ್ಲಿ ಡಾ. ಗುರುರಾಜ ಕರಜಗಿ, ಶಿಕ್ಷಣ ತಜ್ಞರು, ಇವರ ಅಧ್ಯಕ್ಷತೆಯಲ್ಲಿ ಐದು ಸದಸ್ಯರು ಇರುವ ಸಮಿತಿಯನ್ನು ರಚಿಸಲು ತಿರ್ಮಾನಿಸಿ ಆದೇಶಿಸಿದೆ.
ಸದರಿ ಸಮಿತಿಯು ಈ ಬಗ್ಗೆ ಒಂದು ತಿಂಗಳ ಒಳಗಾಗಿ ಸರ್ಕಾರಕ್ಕೆ ವರದಿ ನೀಡಲು ಕೋರಿದೆ. ಹಾಗೂ ಸದರಿ ಸಮಿತಿಯ ಸಭೆಯನ್ನು ಆಯೋಜಿಸುವ ಬಗ್ಗೆ ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಅಗತ್ಯ ಕ್ರಮವಹಿಸತಕ್ಕದ್ದು ಎಂದು ತಿಳಿಸಿದೆ.
ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಪ್ರತಿದಿನ ನಿಯಮಿತವಾಗಿ ಧ್ಯಾನ ಮಾಡಿಸುವುದರಿಂದ ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಾಗಿ, ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳಲು ಸಹಕಾರಿಯಾಗುತ್ತದೆ.
ವಿದ್ಯಾರ್ಥಿಯು ಶಾಲೆಯಲ್ಲಿ ಚಟುವಟಿಕೆಯಿಂದ ಇರಲು ಸಾಧ್ಯವಾಗುತ್ತದೆ ಹಾಗು ಧ್ಯಾನವು ವಿದ್ಯಾರ್ಥಿಗಳ ಭೌತಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಅನುಕೂಲಕರ ಪರಿಣಾಮವನ್ನು ಬೀರುವುದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಧ್ಯಾನವನ್ನು ಶಾಲೆಗಳಿಗೆ ಅಳವಡಿಸಿಕೊಳ್ಳುವುದು ಸೂಕ್ತವಾಗಿರುತ್ತದೆ. ಇದರಿಂದಾಗಿ, ವಿದ್ಯಾರ್ಥಿಗಳು ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣವನ್ನು ಬೋಧಿಸುವ ಅವಶ್ಯಕತೆ ಇರುತ್ತದೆ. ಈ ನೈತಿಕ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆ, ಸಹನೆ ಅನುಕಂಪ, ಸತ್ಯ, ನ್ಯಾಯ, ಸತ್ಚಾರಿತ್ರ್ಯ, ಅಹಿಂಸೆ, ಸಹಕಾರ, ಸಹೋದರತ್ವ, ಸಹಿಷ್ಣತ ಮನೋಭಾವ ಇತ್ಯಾದಿ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ರೂಪಿಸುವುದು ನೈತಿಕ ಶಿಕ್ಷಣದ ಪ್ರಮುಖ ಕರ್ತವ್ಯವಾಗಿದೆ.
ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಭೌಧಿಕ, ಮಾನಸಿಕ ಹಾಗೂ ಆಧ್ಯಾತ್ಮಕ ಗುರಿಗಳನ್ನು ಹುಟ್ಟುಹಾಕಲು ಸಹಕಾರಿಯಾಗುವುದರೊಂದಿಗೆ ವಿದ್ಯಾರ್ಥಿಗಳನ್ನು ಭವಿಷ್ಯದಲ್ಲಿ ಉತ್ತಮ ನಾಗರೀಕರನ್ನಾಗಿ ಮಾರ್ಪಾಡು ಮಾಡಲು ನೈತಿಕ ಶಿಕ್ಷಣವು ಸಹಕಾರಿಯಾಗುವುದರಿಂದ, ನೈತಿಕ ಶಿಕ್ಷಣವನ್ನು ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಬೋಧಿಸುವುದು ಸೂಕ್ತವಾಗಿದೆ ಎಂದು ತಿಳಿಸಿದೆ.