ಮಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಮಂಗಳೂರು- ಉಳ್ಳಾಲ ಕ್ಷೇತ್ರದ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ಅಭ್ಯರ್ಥಿ ಸತೀಶ್ ಕುಂಪಲ ಅವರನ್ನು ಬೃಹತ್ ಮತಗಳಿಂದ ಮಣಿಸಿದ್ದು ಈ ಮೂಲಕ ಉಳ್ಳಾಲ ಪ್ರತಿನಿಧಿಸುವ ಐದನೇ ಅವಧಿಯ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಮುಸ್ಲಿಂ ಮತದಾರರೇ ಹೆಚ್ಚಾಗಿರುವ ಈ ಕ್ಷೇತ್ರದಲ್ಲಿ ಯು.ಟಿ.ಖಾದರ್ ಸುಲಭವಾಗಿ ಗೆಲುವು ಸಾಧಿಸಿದ್ದಾರೆ. 2018 ರ ರಾಜ್ಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಗೆದ್ದ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದರು.
ತಮ್ಮ ಗೆಲುವಿನ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಯು.ಟಿ.ಖಾದರ್, “ಬುದ್ದಿವಂತ ಪಕ್ಷಕ್ಕೆ ಜನ ಮತ ಚಲಾಯಿಸಿದ್ದಾರೆ. ರಾಜ್ಯದಲ್ಲಿ ಬೆಲೆ ಏರಿಕೆ, ನಿರುದ್ಯೋಗದಿಂದ ಜನ ಸಂಕಷ್ಟದಲ್ಲಿದ್ದಾರೆ, ಬಿಜೆಪಿ ಹೇಗೆ ಆಡಳಿತ ನೀಡಿದೆ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ಕರಾವಳಿ ಭಾಗದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗುವ ಬಗ್ಗೆ ಪಕ್ಷದ ಮುಖಂಡರೊಂದಿಗೆ ಚರ್ಚಿಸುತ್ತೇನೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಜನರು ಸ್ಪಷ್ಟ ಜನಾದೇಶ ನೀಡಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.