ಸರ್ಕಾರ ರಚನೆಯಾಗಿ ಎರಡು ತಿಂಗಳಲ್ಲೇ ಸಿದ್ದರಾಮಯ್ಯ ಸರ್ಕಾರ ಸಾಲು ಸಾಲು ಸವಾಲು ಎದುರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಕೆಲ ಸಚಿವರ ವಿರುದ್ಧ ಕೆಲವು ಶಾಸಕರು ಸಿಎಂಗೆ ದೂರು ನೀಡಿದ ಬೆನ್ನಲ್ಲೇ ಇದೀಗ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಸಚಿವ ಚಲುರಾಯಸ್ವಾಮಿ ವಿರುದ್ದ ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿಗಳು ತಿರುಗಿ ಬಿದ್ದಿದ್ದು, ಸಚಿವರು 6-8 ಲಕ್ಷ ರೂಪಾಯಿ ಲಂಚ ನೀಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಸಚಿವರು ಲಂಚ ನೀಡುವಂತೆ ಮೇಲಾಧಿಕಾರಿಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ. ಈ ಲಂಚಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕುಟುಂಬ ಸಮೇತ ವಿಷ ಕುಡಿಯುವುದಾಗಿ ಏಳು ಮಂದಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಅಧಿಕಾರಿಗಳ ದೂರಿನ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ರಾಜ್ಯಪಾಲರ ಆಧೀನ ಕಾರ್ಯದರ್ಶಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ.
ಈಚೆಗೆ ಸಿಎಲ್‌ಪಿ ಸಭೆ ನಡೆಸುವಂತೆ ಹಲವು ಶಾಸಕರು ಪತ್ರ ಬರೆದಿದ್ದರು. ಅದರಲ್ಲಿ ಹಲವು ಸಚಿವರ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ವರ್ಗಾವಣೆ, ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳಲ್ಲಿ ಅಸಮಾಧಾನ ಹೊರಹಾಕಿದ್ದರು. ಸರ್ಕಾರ ಅಸ್ತಿತ್ವಕ್ಕೆ ಬಂದ ಕೇವಲ ಎರಡು ತಿಂಗಳ ಅಂತರದಲ್ಲಿ ಉಂಟಾದ ಈ ಅಸಮಾಧಾನದ ಹೊಗೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್‌ಪಿ ಸಭೆ ಕರೆದು ಶಮನಗೊಳಿಸುವ ಪ್ರಯತ್ನ ನಡೆಸಿದ್ದರು.