ತಮಿಳುನಾಡು ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ರಾಜ್ಯಕ್ಕೆ ಭೇಟಿ ನೀಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದಾರೆ.
ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಪ್ರಕಟಣೆ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಮಿಳುನಾಡಿಗೆ ಭೇಟಿ ನೀಡಲು ನಾಲ್ಕು ಸದಸ್ಯರ ನಿಯೋಗವನ್ನು ನಾಮನಿರ್ದೇಶನ ಮಾಡಿದ್ದಾರೆ. ಅಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದಿಂದ ಕಿರುಕುಳವನ್ನು ಎದುರಿಸುತ್ತಿದ್ದಾರೆ. ಆದಷ್ಟುಬೇಗ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಮಾಜಿ ಮುಂಬೈ ಪೊಲೀಸ್ ಆಯುಕ್ತ, ಸಂಸದ ಡಾ.ಸತ್ಯಪಾಲ್ ಸಿಂಗ್, ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷೆ ಡಿ.ಪುರಂದರೇಶ್ವರಿ, ಸಂಸದ ಪಿ.ಸಿ ಮೋಹನ್ ಅವರು ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.
ಈ ಸಮಿತಿಯು ತಮಿಳುನಾಡಿಗೆ ಭೇಟಿ ನೀಡಿ ವರದಿ ತಯಾರಿಸಿ ಹೈಕಮಾಂಡ್ಗೆ ಸಲ್ಲಿಸಲಿದೆ.