ಸೋಮವಾರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ(KRPP) ಶಾಸಕ, ಮಾಜಿ ಮಂತ್ರಿ ಗಾಲಿ ಜನಾರ್ದನ ರೆಡ್ಡಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಪಕ್ಷ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಯಾವುದೇ ಷರತ್ತುಗಳು ಇಲ್ಲದೇ ಬಿಜೆಪಿ (BJP) ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಸಂಜೆ 4 ಗಂಟೆಗೆ ಜನಾರ್ನದ ರೆಡ್ಡಿ ಕೆಆರ್ಪಿಪಿ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ. ಕೆಆರ್ಪಿಪಿ ವಿಲೀನಕ್ಕೆ ಬಿಜೆಪಿ ಆಫರ್ ನೀಡಿದ್ದು ಈ ವಿಚಾರದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ.
ರಾಜ್ಯಸಭೆ ಚುನಾವಣೆಯ ಒಂದು ದಿನದ ಮೊದಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಜನಾರ್ದನ ರೆಡ್ಡಿ ಅವರನ್ನು ಭೇಟಿಯಾಗಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ್ದ ಜನಾರ್ದನ ರೆಡ್ಡಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದರು.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಜನಾರ್ದನ ರೆಡ್ಡಿ ಮುಂದಾಗಿದ್ದರು. ಆದರೆ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿರಲಿಲ್ಲ. ನಂತರ ಬಿಜೆಪಿಗೆ ರಾಜೀನಾಮೆ ನೀಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಗಂಗಾವತಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ವಿಧಾನ ಸಭಾ ಚುನಾವಣೆಯಲ್ಲಿ ಕೆಆರ್ಪಿಪಿ ಒಂದೇ ಸ್ಥಾನ ಗೆದ್ದಿದ್ದರೂ ಕಲ್ಯಾಣ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ಏಟು ನೀಡಿತ್ತು.
ಕೆಲ ದಿನಗಳ ಹಿಂದೆ ಗೃಹ ಸಚಿವ ಅಮಿತ್ ಶಾ ಅವರನ್ನು ಜನಾರ್ದನ ರೆಡ್ಡಿ ಭೇಟಿ ಮಾಡಿ ಚರ್ಚಿಸಿದ್ದರು.