ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದ ಗೆರೆ ದಾಟುವಲ್ಲಿ ಬಿಜೆಪಿ ವಿಫಲವಾಗಿದೆ. ಬಿಜೆಪಿಗೆ ಬಹುಮತದ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಮಾಜಿ ಸಿಎಂ ಮತ್ತು ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರ ಬೆಂಬಲ ಪಡೆಯಲು ಮುಂದಾಗಿದ್ದಾರೆ ಎನ್ನಲಾಗ್ತಿದೆ.
ಫೋನ್ ಮೂಲಕ ಮಾತುಕತೆ ನಡೆಸಿದ್ದಾರಂತೆ. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ 240 ಸ್ಥಾನಗಳಿಗೆ ಸೀಮಿತವಾಗಿದೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನಗಳ ಅಗತ್ಯವಿದೆ. ಆದರೆ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ಮೋದಿ ಕಿಂಗ್ ಮೇಕರ್ಗಳ ಜೊತೆ ಮಾತುಕತೆಗೆ ಇಳಿದಿದ್ದಾರೆ ಎನ್ನಲಾಗ್ತಿದೆ.
ಒಂದು ವೇಳೆ ಬಿಜೆಪಿಗೆ ಬಹುಮತ ಸಿಗದಿದ್ದಲ್ಲಿ ಮಿತ್ರಪಕ್ಷಗಳ ದೋಸ್ತಿ ಅತ್ಯವಶ್ಯಕವಾಗಿದೆ. ಈ ಚುನಾವಣೆಯಲ್ಲಿ ಆಂಧ್ರಪ್ರದೇಶದ ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ಬಿಹಾರದಲ್ಲಿ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿವೆ. ಟಿಡಿಪಿ 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಜೆಡಿಯು 14 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎನ್‌ಡಿಎ ಬಹುಮತ ಗಳಿಸುವಲ್ಲಿ ಈ ಎರಡು ಪಕ್ಷಗಳ ಪಾತ್ರ ಬಹಳ ಮುಖ್ಯವಾಗಿದೆ. ಒಂದು ರೀತಿಯಲ್ಲಿ ಈ ಇಬ್ಬರು ನಾಯಕರು ಕಿಂಗ್ ಮೇಕರ್ ಆಗಿ ಹೊರಹೊಮ್ಮಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಟಿಡಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿ ರಾಜ್ಯದಲ್ಲಿ ಅವರ ಭರ್ಜರಿ ಗೆಲುವಿಗಾಗಿ ಅವರನ್ನು ಅಭಿನಂದಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರ ಪಕ್ಷವು ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಬೆಂಬಲ ನೀಡಲಿದೆ.
ಬಿಜೆಪಿಗೆ ಬಹುಮತದ ಕೊರತೆ ಉಂಟಾಗುವ ಹಿನ್ನೆಲೆ ಮಿತ್ರಪಕ್ಷಗಳ ದೋಸ್ತಿಗೆ ಗಾಳ ಹಾಕುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ನಿತೀಶ್ ಕುಮಾರ್ ಜೊತೆಗೂ ಕರೆ ಮಾತಾಡಿದ್ದಾರೆ ಎನ್ನಲಾಗ್ತಿದೆ. ಟಿಡಿಪಿಯಲ್ಲಿ ಈ ಹಿಂದೆ ಮೋದಿಯವರನ್ನು ವಿರೋಧಿಸಿದ ಇಬ್ಬರು ನಾಯಕರಿದ್ದಾರೆ. 2019ರ ಲೋಕಸಭೆ ಚುನಾವಣೆಗೂ ಮುನ್ನ ಮೋದಿ ವಿರುದ್ಧ ಕಹಳೆ ಹೂದುವಲ್ಲಿ ಟಿಡಿಪಿ ಪ್ರಮುಖ ಪಾತ್ರ ವಹಿಸಿತ್ತು. ಇನ್ನೊಂದು ಬದಿಯಲ್ಲಿ ನಿತೀಶ್ ಕುಮಾರ್ ಅವರು ಭಾರತ ಮೈತ್ರಿಕೂಟವನ್ನು ತೊರೆದು ಚುನಾವಣೆಗೆ ಮುನ್ನ ಎನ್‌ಡಿಎ ಸೇರಿದ್ದರು.