

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್‌ನ ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹತ್ಯೆಯ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ತುರ್ತು ಕ್ರಮ ಕೈಗೊಂಡಿದ್ದಾರೆ. ಮೇ 2ರ ಶನಿವಾರದಿಂದ ಮೇ 3ರ ಶನಿವಾರ ಬೆಳಿಗ್ಗೆ 6 ಗಂಟೆಯವರೆಗೆ ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ಮತ್ತು ಬಂಟ್ವಾಳ ತಾಲ್ಲೂಕುಗಳಲ್ಲಿ ಶೇಂದಿ ಅಂಗಡಿಗಳು ಹಾಗೂ ಎಲ್ಲ ವಿಧದ ಮದ್ಯದಂಗಡಿಗಳನ್ನು ಮುಚ್ಚಲು ಆದೇಶ ನೀಡಲಾಗಿದೆ.

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಎಂಬುವವರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಮಲು ಪದಾರ್ಥ ಸೇವನೆಯಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ನಿರ್ಬಂಧ ಜಾರಿಗೊಳಿಸಲಾಗಿದೆ.













