

ದಕ್ಷಿಣ ಕನ್ನಡ ಜಿಲ್ಲೆಯ ಮುಂಡೂರು ಗ್ರಾಮದ ಪುತ್ತಿಲ ಮನೆ ನಿವಾಸಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ನೆಲೆಯೂರಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಈಗ ಗಂಭೀರ ದಾಖಲೆ ತೊಂದರೆ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಕಲಬುರ್ಗಿ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಗೆ ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆ, ಜೂನ್ 6, ರಂದು ವಿಚಾರಣೆಗೆ ಅವರು ತಪ್ಪದೇ ಹಾಜರಾಗಬೇಕೆಂದು ಸೂಚಿಸಲಾಗಿದೆ.
ನೋಟಿಸ್ ಪ್ರಕಾರ, ಅರುಣ್ ಕುಮಾರ್ ಪುತ್ತಿಲ ಅವರು ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪವಿಭಾಗದ ದಂಡಾಧಿಕಾರಿಯಾಗಿರುವ ಸಹಾಯಕ ಆಯುಕ್ತರು ಜಾರಿ ಮಾಡಿದ ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ.













