

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಕಡಬ, ತಾಲೂಕು ನೆಲ್ಯಾಡಿ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ಆಶ್ರಯದಲ್ಲಿ ‘ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ’ ವು ನೆಲ್ಯಾಡಿಯ ಸೂರ್ಯನಗರದ ಶ್ರೀರಾಮ ವಿದ್ಯಾಲಯದಲ್ಲಿ ನೆರವೇರಿತು.
ಶ್ರೀರಾಮ ವಿದ್ಯಾಲಯದ ಆಂಗ್ಲಮಾಧ್ಯಮ ವಿಭಾಗದ ಮುಖ್ಯಶಿಕ್ಷಕಿ ಕಾವ್ಯ ಮಾತಾಜಿ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್ ವಹಿಸಿ, ಮಕ್ಕಳಿಗೆ ಆರೋಗ್ಯಕರ ಜೀವನಶೈಲಿ ಹಾಗೂ ಸಮಾಜಮುಖಿ ಚಟುವಟಿಕೆಗಳ ಕುರಿತು ಮಾರ್ಗದರ್ಶನ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶಿವಪ್ರಸಾದ್ ರೈ ಮೈಲೇರಿ ಅವರು ದುಷ್ಚಟಗಳಿಂದಾಗುವ ದುಷ್ಪರಿಣಾಮಗಳನ್ನು ವಿವರಿಸಿ, ದುಷ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ಸ್ವತಃ ದುಷ್ಚಟದಿಂದ ದೂರವಿದ್ದು, ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ಪ್ರೇರಣೆ ನೀಡಿದರು.
ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯ ತುಕರಾಮ ರೈ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾದೇರಿ ಒಕ್ಕೂಟ ಅಧ್ಯಕ್ಷ ಸೆಬಾಸ್ಟಿನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ಒಕ್ಕೂಟ ಉಪಾಧ್ಯಕ್ಷೆ ಸುಮಿತ್ರಾ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವಲಯ ಮೇಲ್ವಿಚಾರಕರಾದ ಆನಂದ್ ಡಿ.ಬಿ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸುಜನಾ ಮಾತಾಜಿ ಸ್ವಾಗತಿಸಿದರು, ವಿದ್ಯಾರ್ಥಿನಿ ಸಂಹಿತಾ ವಂದಿಸಿದರು.






