





ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘ ನಿ. ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಘದ ಸಿಬ್ಬಂದಿ ಹಾಗೂ ಗ್ರಾಹಕರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಉಷಾ ಅಂಚನ್ ಅವರು ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಹಿಳೆಯರು ಸಮಾಜದಲ್ಲಿ ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಕರೆ ನೀಡಿದರು. ಮಹಿಳೆಯರು ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿ ಮುನ್ನಡೆಯಬೇಕು. ಕುಟುಂಬ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದ್ದು, ಪ್ರತಿಯೊಬ್ಬ ಮಹಿಳೆಯೂ ಆತ್ಮವಿಶ್ವಾಸದಿಂದ ಮುಂದೆ ಬಂದು ತಮ್ಮ ಧ್ವನಿಯನ್ನು ಎತ್ತಿ ಮಾತನಾಡುವಂತಾಗಬೇಕು. ಮಹಿಳೆಯರು ಪರಸ್ಪರ ಸಹಕಾರ ಮತ್ತು ಪ್ರೋತ್ಸಾಹದ ಮೂಲಕ ಮತ್ತೊಬ್ಬರಿಗೆ ಮಾದರಿಯಾಗುವಂತಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಮುಖ್ಯ ಕಾರ್ಯದರ್ಶಿ ಚೈತನ್ಯ ಹೆಚ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಸಾಧನೆಗೆ ಪ್ರೇರಣೆ ನೀಡಿದ ಹಾಗೂ ಮಾರ್ಗದರ್ಶನ ನೀಡಿದ ಸಂಘದ ಅಧ್ಯಕ್ಷೆ ಉಷಾ ಅಂಚನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘದ ಮೂಲಕ ಮಹಿಳೆಯರಿಗೆ ಆರ್ಥಿಕ ಸಬಲತೆ ಮತ್ತು ಆತ್ಮವಿಶ್ವಾಸ ದೊರಕುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಘದ ಸಿಬ್ಬಂದಿ, ಸದಸ್ಯರು ಹಾಗೂ ಗ್ರಾಹಕರು ಉಪಸ್ಥಿತರಿದ್ದು, ಮಹಿಳಾ ದಿನಾಚರಣೆಯ ಮಹತ್ವದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಮಹಿಳೆಯರ ಸಾಧನೆಗಳನ್ನು ಸ್ಮರಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಸಂಘದ ಸಿಬ್ಬಂದಿ ಶ್ವೇತಕುಮಾರಿ ವಂದಿಸಿದರು





