




ನೆಲ್ಯಾಡಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ವಿದ್ಯಾಭ್ಯಾಸವೇ ಸಾಕಾಗದೆ, ವಿವಿಧ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಅತ್ಯಗತ್ಯವಾಗಿರುವ ಸಂದರ್ಭದಲ್ಲಿ, ಜೆಸಿಐ ನೆಲ್ಯಾಡಿ ವತಿಯಿಂದ ಆಯೋಜಿಸಲಾದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ನೆಲ್ಯಾಡಿ ಆರಾಧ್ಯ ಬ್ಯೂಟಿ ಪಾರ್ಲರ್, ದುರ್ಗಾ ಕಾಂಪ್ಲೆಕ್ಸ್‌ನಲ್ಲಿ ಒಂದು ವಾರಗಳ ಕಾಲ ನಡೆಯಲಿರುವ ತರಬೇತಿ ಶಿಬಿರವು ಮಾ.23 ರಂದು ಉದ್ಘಾಟನೆಗೊಂಡಿತು.

ಗೋಳಿತಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಜಯಂತಿ ಬಿ.ಎಂ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಲು ಕೌಶಲ್ಯಗಳ ಅಗತ್ಯತೆಯ ಬಗ್ಗೆ ಸ್ಪಷ್ಟವಾಗಿ ತಿಳಿಸಿದರು. ಕೇವಲ ಪಠ್ಯಪಠಣಕ್ಕೆ ಸೀಮಿತವಾಗದೆ, ಜೀವನ ಕೌಶಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಧನೆ ಸಾಧ್ಯವೆಂದು ಅವರು ಅಭಿಪ್ರಾಯಪಟ್ಟರು.
ಯುವಜನತೆಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ ಸಂಪನ್ಮೂಲ ವ್ಯಕ್ತಿಗಳಾಗಿ ಸಂಧ್ಯಾ ಅವಿನಾಶ್ ರೈ ಹಾಗೂ ರಂಜಿತಾ ರವೀಂದ್ರ ಅವರು ಭಾಗವಹಿಸಿ, ಕೌಶಲ್ಯಾಭಿವೃದ್ಧಿಯ ಮಹತ್ವ, ವ್ಯಕ್ತಿತ್ವ ವಿಕಾಸ, ಪರಿಣಾಮಕಾರಿ ಸಂವಹನ ಕೌಶಲ್ಯಗಳು ಹಾಗೂ ಜೀವನದಲ್ಲಿ ಯಶಸ್ಸು ಸಾಧಿಸಲು ಅಗತ್ಯವಾದ ಮಾರ್ಗಗಳನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆಸಿಐ ನೆಲ್ಯಾಡಿ ಅಧ್ಯಕ್ಷೆ ಪ್ರವೀಣಿ ಶೆಟ್ಟಿ ಅವರು ಸ್ವಾಗತಿಸಿ ಮಾತನಾಡಿ, ಜೆಸಿಐ ಸಂಘಟನೆಯ ಸಮಾಜಮುಖಿ ಚಟುವಟಿಕೆಗಳ ಕುರಿತು ವಿವರಿಸಿದರು. ಜೆಸಿಐ ಕೇವಲ ಕಾರ್ಯಕ್ರಮಗಳನ್ನು ನಡೆಸುವ ಸಂಘಟನೆ ಮಾತ್ರವಲ್ಲ, ವ್ಯಕ್ತಿಯ ಸಮಗ್ರ ಅಭಿವೃದ್ಧಿಗೆ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಅವರು ಒತ್ತಿಹೇಳಿದರು. ಯುವಜನರನ್ನು ಸಮಾಜದ ಸಶಕ್ತ ನಾಗರಿಕರನ್ನಾಗಿ ರೂಪಿಸುವ ದಿಸೆಯಲ್ಲಿ ಜೆಸಿಐ ಸದಾ ಮುಂಚೂಣಿಯಲ್ಲಿದೆ ಎಂದರು.
ಕಾರ್ಯಕ್ರಮದಲ್ಲಿ ನೆಲ್ಯಾಡಿ ಜೆಸಿಐನ ಪದಾಧಿಕಾರಿಗಳು, ಸದಸ್ಯರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಸುಪ್ರಿತಾ ರವಿಚಂದ್ರ ನಿರೂಪಿಸಿದರು. ದೀಪಕ್ ನೆಲ್ಯಾಡಿ ಜೆಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ವಂದಿಸಿದರು.





