





ನೆಲ್ಯಾಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯ ಕಾರ್ಯಕ್ರಮ ಮನ್ ಕೀ ಬಾತ್ ನ 132ನೇ ಕಂತಿನ ವೀಕ್ಷಣಾ ಕಾರ್ಯಕ್ರಮವು ನೆಲ್ಯಾಡಿ ಗ್ರಾಮದ ಪಡುಬೆಟ್ಟು ಕಾಲೋನಿಯ ನಿವಾಸಿ ಬಾಲಕೃಷ್ಣ ಅವರ ಮನೆಯಲ್ಲಿ ಬಾನುವಾರದಂದು ನಡೆಯಿತು.
ಕಾರ್ಯಕ್ರಮವನ್ನು ಬಾಲಕೃಷ್ಣ ಅವರ ಮಾತೃಶ್ರೀ ಭವಾನಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರತಿ ಮೂಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಸಮಗ್ರ ಮಾಹಿತಿಯನ್ನು ಹೊಂದಿದ್ದು, ಪ್ರತಿ ತಿಂಗಳ ಕೊನೆಯ ಭಾನುವಾರ ಮನ್ ಕೀ ಬಾತ್ ಕಾರ್ಯಕ್ರಮದ ಮೂಲಕ ಜನರೊಂದಿಗೆ ನೇರ ಸಂವಾದ ನಡೆಸುತ್ತಿದ್ದಾರೆ. ದೇಶದ ಆರ್ಥಿಕ ಬೆಳವಣಿಗೆ, ಅಭಿವೃದ್ಧಿ ಯೋಜನೆಗಳು ಹಾಗೂ ಯುವಕರಿಗೆ ಪ್ರೇರಣೆ ನೀಡುವ ಹಲವಾರು ವಿಷಯಗಳನ್ನು ಈ ಕಾರ್ಯಕ್ರಮದ ಮೂಲಕ ತಲುಪಿಸಲಾಗುತ್ತಿದೆ ಎಂದರು.
ಕೇಂದ್ರ ಸರ್ಕಾರವು ಸ್ವಉದ್ಯೋಗಕ್ಕೆ ಶೇಕಡಾ 90ರಷ್ಟು ಆರ್ಥಿಕ ನೆರವನ್ನು ನೀಡುತ್ತಿರುವುದು ಮಹತ್ತರವಾದ ಅವಕಾಶ. ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು. ಬಜೆಟ್‌ನಲ್ಲಿ ಘೋಷಿಸಲಾದ ಯೋಜನೆಗಳನ್ನು ಸರಿಯಾಗಿ ಬಳಸಿಕೊಳ್ಳುವುದು ಜನರ ಜವಾಬ್ದಾರಿ ಎಂದು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ 1876 ಬೂತ್‌ಗಳಲ್ಲಿ ಈ ಕಾರ್ಯಕ್ರಮವನ್ನು ವೀಕ್ಷಿಸಲಾಗುತ್ತಿರುವುದನ್ನು ಅವರು ಉಲ್ಲೇಖಿಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾಡ್ತಾ ಅವರು ಮಾತನಾಡಿ ಮನ್ ಕೀ ಬಾತ್ ಕಾರ್ಯಕ್ರಮವು ದೇಶದಲ್ಲಿ ನಡೆಯುತ್ತಿರುವ ಬದಲಾವಣೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ಮಹತ್ವದ ವೇದಿಕೆಯಾಗಿದೆ. ಬೂತ್ ಮಟ್ಟದ ಪದಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ನಡೆಯಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೆಚ್ಚು ಗಮನಹರಿಸಿ ಮಾಹಿತಿ ಹಂಚಿಕೊಳ್ಳಬೇಕು. ಈ ಮೂಲಕ ಗ್ರಾಮಗಳ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರವನ್ನು ದೇಶದ ಮಾದರಿ ಕ್ಷೇತ್ರವನ್ನಾಗಿಸಲು ಪ್ರತಿಯೊಬ್ಬರ ಜವಾಬ್ದಾರಿ ಇದೆ ಎಂದು ಹೇಳಿದರು.
ವೇದಿಕೆಯಲ್ಲಿ ಜಿಲ್ಲಾ ಮನ್ ಕೀ ಬಾತ್ ಸಹ ಸಂಚಾಲಕ ಜಯಕುಮಾರ್, ಎಸ್ಸಿ ಯುವ ಮೋರ್ಚಾ ಉಪಾಧ್ಯಕ್ಷ ಶಿವಪ್ರಸಾದ್, ಜಿಲ್ಲಾ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಬಾಲಕೃಷ್ಣ ಬಾಣಜಾಲು, ನೆಲ್ಯಾಡಿ ಶಕ್ತಿ ಕೇಂದ್ರ ಅಧ್ಯಕ್ಷ ರವಿಪ್ರಸಾದ್ ಬಲ್ಯ ಹಾಗೂ 21ನೇ ಬೂತ್ ಅಧ್ಯಕ್ಷ ರಕ್ಷಿತ್ ಮಡಿವಾಳ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಎಸ್ಸಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಿ ಏಳ್ತಿಮಾರ್ ಸ್ವಾಗತಿಸಿ ನಿರೂಪಿಸಿದರು. ರವಿಪ್ರಸಾದ್ ಬಲ್ಯ ವಂದಿಸಿದರು. ಈ ಸಂದರ್ಭದಲ್ಲಿ ಬೂತ್ ಮಟ್ಟದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿ, ಬಳಿಕ ಪ್ರಧಾನಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಸಮೂಹವಾಗಿ ವೀಕ್ಷಿಸಿದರು.




