






ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಠಾರ ಸಮೀಪದ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಮೇ 21ರ ಗುರುವಾರ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಗದಗ ಮೂಲದ ಕಿರಣ್ ಎಂದು ಗುರುತಿಸಲಾಗಿದ್ದು, ಅವರು ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದರು. ಕಲ್ಲಡ್ಕದಲ್ಲಿ ವಾಸ್ತವ್ಯ ಹೊಂದಿದ್ದ ಅವರು ಫಾರ್ಮಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಸ್ನೇಹಿತರೊಂದಿಗೆ ನದಿಗೆ ಸ್ನಾನಕ್ಕೆಂದು ತೆರಳಿದ್ದ ವೇಳೆ ಕಿರಣ್ ಅವರು ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಹೊಳೆಯಲ್ಲಿ ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಹೊಳೆಯಲ್ಲಿ ಕಣ್ಮರೆಯಾಗಿದ್ದ ಕಿರಣ್ ಅವರ ಮೃತದೇಹವನ್ನು ಪತ್ತೆ ಹಚ್ಚಿ ಮೇಲಕ್ಕೆತ್ತಲಾಯಿತು.
ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.


