






ಉಪ್ಪಿನಂಗಡಿ: ಕಳೆದ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 158/2015ರ ಕಲಂ 457, 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರ ಎಂಬಾತನು ಹಲವು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದನು. ಮೇ. 22ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿ ಎಸೈ ಕೌಶೀಕ್ ಬಿ ಸಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಶಿವರಾಮ್ ರೈ ಹಾಗೂ ಮಹದೇವ ಅವರು ಮಂಗಳೂರಿನ ಪಣಂಬೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೂ, ಆರೋಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


