






ನೆಲ್ಯಾಡಿ: 2026-27ನೇ ಶೈಕ್ಷಣಿಕ ಸಾಲಿನ ಅಂಗವಾಗಿ ಪಡುಬೆಟ್ಟು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಮಹಾ ಪೋಷಕರ ಸಭೆ ಸಂಭ್ರಮದಿಂದ ನಡೆಯಿತು.
ಹೊಸದಾಗಿ ಶಾಲೆಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಬಲೂನ್ಗಳನ್ನು ನೀಡಿ, ವಾದ್ಯ ವೃಂದದೊಂದಿಗೆ ಶಾಲಾ ಆವರಣಕ್ಕೆ ಬರಮಾಡಿಕೊಳ್ಳುವ ಮೂಲಕ ವಿಶೇಷವಾಗಿ ಸ್ವಾಗತಿಸಲಾಯಿತು. ಬಳಿಕ ನಡೆದ ಮಹಾ ಪೋಷಕರ ಸಭೆಯಲ್ಲಿ ಶಾಲಾಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.
ಕಾರ್ಯಕ್ರಮವನ್ನು ನೆಲ್ಯಾಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸಲಾಂ ಬಿಲಾಲ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಉಮೇಶ್ ಶಾಂತಿಮಾರು ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿ ಹೊಸ ಶೈಕ್ಷಣಿಕ ವರ್ಷದ ಶುಭಾರಂಭಕ್ಕೆ ಚಾಲನೆ ನೀಡಲಾಯಿತು.
ವೇದಿಕೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿಚಂದ್ರ ಪಡುಬೆಟ್ಟು, ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ರಫೀಕ್ ಉಳಿತೊಟ್ಟು ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲೆಯ ಮುಖ್ಯಶಿಕ್ಷಕಿ ಜೆಸ್ಸಿ ಕೆ.ಎ. ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ಸಾಧನೆಗಳು ಹಾಗೂ ಮುಂದಿನ ಶೈಕ್ಷಣಿಕ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಸಹಶಿಕ್ಷಕಿ ಸಜಿನ ಕೆ.ಎ. ಸ್ವಾಗತಿಸಿ, ಸಹಶಿಕ್ಷಕಿ ಮಮತ ಸಿ.ಹೆಚ್. ವಂದಿಸಿದರು. ಸಹಶಿಕ್ಷಕಿ ಕಮಲಾಕ್ಷಿ ಕೆ. ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ಶಿಕ್ಷಕ ವೃಂದ ಹಾಗೂ ಅಡುಗೆ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿ ಸಹಕರಿಸಿದರು. ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಶಾಲಾ ಕುಟುಂಬ ಸಂಭ್ರಮದಿಂದ ಆಚರಿಸಿಕೊಂಡಿತು.


