ವಿದ್ಯಾರ್ಥಿಗಳು ಗುರಿ, ಶಿಸ್ತು ಮತ್ತು ಗುರುಗಳ ಗೌರವವನ್ನು ಜೀವನದ ಮೌಲ್ಯವನ್ನಾಗಿಸಿಕೊಳ್ಳಬೇಕು- ಅಬ್ರಹಾಂ ವರ್ಗೀಸ್







ನೆಲ್ಯಾಡಿ: ಸಂತ ಚಾರ್ಜ್ ವಿದ್ಯಾಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸುಮಾರು 48 ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಸನ್ಮಾನ ಕಾರ್ಯಕ್ರಮ ಶನಿವಾರ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮವನ್ನು ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಸನ್ಮಾನ ಮತ್ತು ಗೌರವವು ಕೇವಲ ಒಂದು ಕಾರ್ಯಕ್ರಮಕ್ಕೆ ಸೀಮಿತವಾಗದೆ ಜೀವನಪರ್ಯಂತ ಪ್ರೇರಣೆಯಾಗಿ ಉಳಿಯಬೇಕು, ದೇವರು ಪ್ರತಿಯೊಬ್ಬರಿಗೂ ವಿಶಿಷ್ಟ ಪ್ರತಿಭೆಯನ್ನು ನೀಡಿದ್ದಾನೆ. ಅದನ್ನು ನಿರಂತರ ಪರಿಶ್ರಮ, ಶಿಸ್ತು ಮತ್ತು ಗುರಿಯೊಂದಿಗೆ ಬೆಳೆಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ. ಇಂದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಿರುವುದು ಅವರ ವೈಯಕ್ತಿಕ ಸಾಧನೆಗೆ ಮಾತ್ರವಲ್ಲ, ಈ ಸಂಸ್ಥೆಯಲ್ಲಿ ಕಲಿಯುತ್ತಿರುವ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಲೆಂಬ ಉದ್ದೇಶದಿಂದ. ನಮ್ಮ ಸಂಸ್ಥೆ 49ನೇ ವರ್ಷದ ಪಯಣದಲ್ಲಿದ್ದು, ಇಲ್ಲಿಂದ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಬದುಕು ಕಟ್ಟಿಕೊಂಡಿದ್ದಾರೆ. ಅವರ ಮಕ್ಕಳೂ ಇದೇ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ನಾವು ಕಲಿತ ಶಾಲೆ ಮತ್ತು ನಮಗೆ ವಿದ್ಯೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ಅಂತರ್‌ರಾಜ್ಯ ಕ್ರೀಡಾ ನಿರೂಪಕ ಸುರೇಶ್ ಪಡಿಪಂಡ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿಯನ್ನು ಹೊಂದಿರಬೇಕು ಮತ್ತು ಆ ಗುರಿ ಸಾಧನೆಗೆ ಗುರುಗಳ ಮಾರ್ಗದರ್ಶನದ ಮೇಲೆ ನಂಬಿಕೆ ಇಡಬೇಕು. ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಅತ್ಯಂತ ಮಹತ್ವದ್ದು. ಶಿಕ್ಷಕರು ವಿದ್ಯಾರ್ಥಿಗಳ ಬಗ್ಗೆ ಪೋಷಕರಿಗೆ ತಿಳಿಸಿದಾಗ ಅದನ್ನು ಸಕಾರಾತ್ಮಕವಾಗಿ ಅರ್ಥಮಾಡಿಕೊಳ್ಳಬೇಕು. ಸಂತ ಚಾರ್ಜ್ ವಿದ್ಯಾಸಂಸ್ಥೆಯ ವಿಶೇಷತೆ ಎಂದರೆ ಇಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ತಮ್ಮ ಮಕ್ಕಳಂತೆ ಕಾಣುವ ವಾತಾವರಣವಿದೆ. ಧಾರ್ಮಿಕ ಸಾಮರಸ್ಯಕ್ಕೆ ಆದ್ಯತೆ ನೀಡುತ್ತಾ ವಿದ್ಯಾರ್ಥಿಗಳು ತಮ್ಮ ತಮ್ಮ ಧರ್ಮವನ್ನು ಪಾಲಿಸಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಸುಸಜ್ಜಿತ ವಿಜ್ಞಾನ ಪ್ರಯೋಗಾಲಯ, ಗಣಿತ ಪ್ರಯೋಗಾಲಯ ಸೇರಿದಂತೆ ಗುಣಮಟ್ಟದ ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಿರುವುದು ಸಂಸ್ಥೆಯ ಹೆಮ್ಮೆಯ ಸಾಧನೆಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿ ಆಸೀನರನ್ನಾಗಿ ಮಾಡಿ ವಿಶೇಷವಾಗಿ ಸನ್ಮಾನಿಸಲಾಯಿತು. ಗಣ್ಯರು ನಗದು ಬಹುಮಾನ ಹಾಗೂ ಸ್ಮರಣಿಕೆ ನೀಡಿ ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸಿದರು. ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದ ಅನುಭವಗಳು, ಶಿಕ್ಷಕರ ಮಾರ್ಗದರ್ಶನ ಮತ್ತು ಸಾಧನೆಯ ಹಾದಿಯನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಹಳೆಯ ವಿದ್ಯಾರ್ಥಿನಿ, ವಿಜ್ಞಾನ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದ ಅನಘ ಕೆ. ಅವರನ್ನು ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
ವಿದ್ಯಾಸಂಸ್ಥೆಯ ಸಂಚಾಲಕರಾದ ಫಾ.ನೋಮಿಸ್ ಕುರಿಯಾಕೋಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಏಲಿಯಾಸ್ ಎಂ.ಕೆ. ಸ್ವಾಗತಿಸಿದರು. ಉಪನ್ಯಾಸಕ ವಿಶ್ವನಾಥ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಮುಖ್ಯಶಿಕ್ಷಕ ಎಂ.ವೈ. ತೋಮಸ್ ವಂದಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆ ಆಡಳಿತಮಂಡಳಿ ಉಪಾಧ್ಯಕ್ಷ ಕೋರ್ ಎಪಿಸ್ಕೋಪ ಪಿ. ಕೆ ಅಬ್ರಹಾಂ, ನಿವೃತ್ತ ಕನ್ನಡ ಉಪನ್ಯಾಸಕ ವಿ.ಆರ್ ಹೆಗ್ಡೆ, ನಿವೃತ್ತ ದೈಹಿಕ ಶಿಕ್ಷಕ ಉಲಹನ್ನನ್.ಪಿ.ಎಂ, ನಿವೃತ್ತ ಆಂಗ್ಲ ಮಾಧ್ಯಮ ಮುಖ್ಯಶಿಕ್ಷಕ ಹರಿಪ್ರಸಾದ್, ನಿವೃತ್ತ ಸಿಬ್ಬಂದಿ ಜೋಸೆಫ್, ವಿದ್ಯಾರ್ಥಿಗಳು, ಪೋಷಕರು, ಉಪನ್ಯಾಸಕರು, ಶಿಕ್ಷಕರು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು


