ದುಶ್ಚಟಗಳಿಂದ ದೂರವಿದ್ದು ಆದರ್ಶ ಜೀವನ ನಡೆಸಿ – ಫಾ.ನೋಮಿಸ್ ಕುರಿಯಾಕೋಸ್








ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ಇವರ ಆಶ್ರಯದಲ್ಲಿ ಹಾಗೂ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಸಹಕಾರದೊಂದಿಗೆ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಮಾಹಿತಿ ಕಾರ್ಯಾಗಾರವು ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಸಂಚಾಲಕ ಫಾ.ನೋಮಿಸ್ ಕುರಿಯಾಕೋಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ತಂಬಾಕು ಹಾಗೂ ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು. ಮೌಲ್ಯಯುತ ಜೀವನ ನಡೆಸುವ ಮೂಲಕ ಇತರರಿಗೂ ಪ್ರೇರಣೆಯಾಗಬೇಕು. ಯುವಜನರಿಂದಲೇ ದುಶ್ಚಟಗಳ ನಿರ್ಮೂಲನೆಗೆ ಚಾಲನೆ ದೊರಕಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಇಂದುಶೇಖರ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ವೇದಿಕೆ ನಿರಂತರವಾಗಿ ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳ ಸಹಕಾರ ಅತ್ಯಗತ್ಯವಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ನಿಕಟಪೂರ್ವ ಅಧ್ಯಕ್ಷ ಮಹೇಶ್ ಕೆ. ಸವಣೂರು ಮಾತನಾಡಿ ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರು ತಮ್ಮ ಬಗ್ಗೆ ಇಟ್ಟಿರುವ ಕನಸುಗಳನ್ನು ನನಸಾಗಿಸುವತ್ತ ಗಮನ ಹರಿಸಬೇಕು. ಕೆಟ್ಟ ಸಹವಾಸದಿಂದ ದೂರವಿದ್ದು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸವಣೂರು ಪ್ರೌಢಶಾಲೆಯ ಶಿಕ್ಷಕ ಕಿಶಾನ್ ಬಿ.ವಿ. ಅವರು ತಂಬಾಕು ಸೇವನೆ ಹಾಗೂ ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ದುಶ್ಚಟಗಳಿಗೆ ಬಲಿಯಾದ ವ್ಯಕ್ತಿ ಜೀವನಪೂರ್ತಿ ನೋವು ಹಾಗೂ ಅವಮಾನಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ಚಟಗಳಿಂದ ದೂರವಿದ್ದು ಉತ್ತಮ ಸಮಾಜ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಹಾಗೂ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬೆಳೆಯಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಏಲಿಯಾಸ್ ಎಂ.ಕೆ., ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಸದಸ್ಯರಾದ ವರ್ಗಿಸ್ ಹಾಗೂ ತುಕಾರಾಮ ರೈ ಹೊಸಮನೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಸೇವಾಪ್ರತಿನಿಧಿ ಹೇಮಾವತಿ ಮತ್ತು ಸುಮನ ಸಹಕರಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವಿಶ್ವನಾಥ ಶೆಟ್ಟಿ ವಂದಿಸಿದರು. ನೆಲ್ಯಾಡಿ ವಲಯದ ಮೇಲ್ವಿಚಾರಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.



