










ನೆಲ್ಯಾಡಿ: ಪಡುಬೆಟ್ಟು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿರುವ ವರಮಹಾಲಕ್ಷ್ಮಿ ಪೂಜೆಯ ಸಿದ್ಧತೆಗಳ ಅಂಗವಾಗಿ ಪೂಜಾ ಸಮಿತಿಯ ಸಭೆಯು ಬುಧವಾರದಂದು ದೇವಸ್ಥಾನದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸುಬ್ರಹ್ಮಣ್ಯ ಶಬರಾಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಸಂಧ್ಯಾ ಸುರೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಸುಲತಾ ಮೋಹನ್ ಚಂದ್ರ.ಬಿ, ಕೋಶಾಧಿಕಾರಿಯಾಗಿ ಸವಿತಾ ಹರಿಶ್ಚಂದ್ರ ಶೆಟ್ಟಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ದೇವಸ್ಥಾನದ ಆಡಳಿತ ಮೊಕ್ತೇಸರ ಸುಬ್ರಹ್ಮಣ್ಯ ಶಬರಾಯ, ದೇವಸ್ಥಾನದಲ್ಲಿ ನಡೆಯುವ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮವು ಭಕ್ತರ ಸಹಕಾರದಿಂದ ಯಶಸ್ವಿಯಾಗಿ ನಡೆಯುತ್ತಿದೆ. ಈ ಬಾರಿಯ ವರಮಹಾಲಕ್ಷ್ಮಿ ಪೂಜೆಯನ್ನು ಇನ್ನಷ್ಟು ಶಿಸ್ತುಬದ್ಧವಾಗಿ ಹಾಗೂ ಭಕ್ತಿಭಾವದಿಂದ ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೂಜೆಯ ಯಶಸ್ಸಿಗೆ ಕೈಜೋಡಿಸುವಂತೆ ಕರೆ ನೀಡಿದರು.
ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್ ಕೆ.ಎಸ್. ಮಾತನಾಡಿ, ದೇವಸ್ಥಾನದ ಅಭಿವೃದ್ಧಿಯೊಂದಿಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ಸಮಾನ ಆದ್ಯತೆ ನೀಡಲಾಗುತ್ತಿದೆ. ನೂತನವಾಗಿ ಆಯ್ಕೆಯಾದ ಸಮಿತಿಯು ಪೂಜಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಭವ್ಯವಾಗಿ ಆಯೋಜಿಸಿ ದೇವಸ್ಥಾನದ ಗೌರವವನ್ನು ಮತ್ತಷ್ಟು ಹೆಚ್ಚಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಭಜನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪಟ್ಟೆ, ಮಹಿಳಾ ಭಜನಾ ಸಮಿತಿ ಅಧ್ಯಕ್ಷೆ ಸಂಧ್ಯಾ ಸುರೇಶ್ ಶೆಟ್ಟಿ, ಸುಲತಾ ಮೋಹನ್ ಚಂದ್ರ, ಸವಿತಾ ಹರಿಶ್ಚಂದ್ರ ಶೆಟ್ಟಿ, ಸೌಮ್ಯ ಅಶೋಕ ಶೆಟ್ಟಿ, ಅನಸೂಯ ನಾಗರತ್ನ, ಜಯಲಕ್ಷ್ಮಿ, ಸುಮಿತ್ರ ಎಸ್. ನಾಯ್ಕ್, ವಿಮಲ, ವೀಣಾ ಸ್ವಾತಿ, ಸುಜಾತಾ ರಮೇಶ್ ಶೆಟ್ಟಿ ಸೇರಿದಂತೆ ಅನೇಕ ಭಕ್ತರು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.



