










ವಿಟ್ಲ: ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಗಾಳಿ ಸಹಿತ ಮಳೆಗೆ ಮಾಣಿ ಸಮೀಪ ಮಾಣಿ–ಮೈಸೂರು ಮುಖ್ಯರಸ್ತೆಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.
ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ಎರಡೂ ದಿಕ್ಕಿನ ವಾಹನಗಳ ಸಂಚಾರ ಸ್ಥಗಿತಗೊಂಡಿತು. ಇದರ ಪರಿಣಾಮ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು, ಉದ್ಯೋಗಕ್ಕೆ ಹಾಗೂ ವಿವಿಧ ಕೆಲಸಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸಿದರು. ರಸ್ತೆ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ವಾಹನಗಳನ್ನು ಕೊಡಾಜೆ ಗಡಿ–ಬೊಳ್ಳುಕಲ್ಲು ರಸ್ತೆಯ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ವ್ಯವಸ್ಥೆ ಮಾಡಲಾಯಿತು. ಬಳಿಕ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರವನ್ನು ತೆರವುಗೊಳಿಸಿದ ನಂತರ ಸಂಚಾರವನ್ನು ಪುನಃ ಸುಗಮಗೊಳಿಸಲಾಯಿತು.
ಭಾರೀ ಗಾಳಿ–ಮಳೆಯಿಂದ ಮರಗಳು ಉರುಳುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ಮರಗಳನ್ನು ಮುಂಚಿತವಾಗಿ ತೆರವುಗೊಳಿಸುವಂತೆ ಸ್ಥಳೀಯರು ಸಂಬಂಧಪಟ್ಟ ಇಲಾಖೆಯನ್ನು ಆಗ್ರಹಿಸಿದ್ದಾರೆ.



