










ನೆಲ್ಯಾಡಿ: ರೆಖ್ಯ ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್, ನಿಸರ್ಗ ಇಕೋ ಕ್ಲಬ್ ಹಾಗೂ ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸೋಮವಾರ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್ ಅಧ್ಯಕ್ಷ ಉಲಹನ್ನನ್ ಪಿ.ಎಂ. ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಲಹನ್ನನ್ ಪಿ.ಎಂ. ಅವರು ಪ್ರಕೃತಿಯ ಸಂರಕ್ಷಣೆ ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದೆ. ಇಂದು ನೆಡುವ ಪ್ರತಿಯೊಂದು ಗಿಡವೂ ಮುಂದಿನ ಪೀಳಿಗೆಗೆ ಅಮೂಲ್ಯ ಆಸ್ತಿಯಾಗಲಿದೆ. ಪರಿಸರದ ಸಮತೋಲನ ಕಾಪಾಡಲು ವಿದ್ಯಾರ್ಥಿಗಳು ಈಗಿನಿಂದಲೇ ಗಿಡ ನೆಡುವುದು, ಬೆಳೆಸುವುದು ಮತ್ತು ಸಂರಕ್ಷಿಸುವ ಸಂಕಲ್ಪ ಮಾಡಬೇಕು. ಕೇವಲ ಸಸಿ ನೆಡುವುದಷ್ಟೇ ಅಲ್ಲ, ಅದು ಮರವಾಗಿ ಬೆಳೆಯುವವರೆಗೆ ಅದರ ಆರೈಕೆ ಮಾಡುವ ಮನೋಭಾವ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಕೊಕ್ಕಡ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯ ಅವರು ಅರಣ್ಯ ಸಂಪತ್ತು ಮಾನವನ ಬದುಕಿನ ಜೀವನಾಡಿಯಾಗಿದೆ. ಹವಾಮಾನ ವೈಪರೀತ್ಯ, ಅರಣ್ಯ ನಾಶ ಮತ್ತು ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಇಂದಿನ ಸಂದರ್ಭದಲ್ಲಿ ಸಸಿ ನೆಡುವಂತಹ ಕಾರ್ಯಕ್ರಮಗಳು ಅತ್ಯಂತ ಮಹತ್ವದ್ದಾಗಿವೆ. ವಿದ್ಯಾರ್ಥಿಗಳು ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಂಡು ತಮ್ಮ ಮನೆ, ಶಾಲೆ ಹಾಗೂ ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ವೇದಿಕೆಯಲ್ಲಿ ರೆಖ್ಯ ಶಾಖೆಯ ಉಪವಲಯ ಅರಣ್ಯಾಧಿಕಾರಿ ಯತೀಂದ್ರ ಕುಮಾರ್, ಶಿರಾಡಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ರಾಜೇಶ್, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಅರವಿಂದ ಗೋಖಲೆ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್ ಕಾರ್ಯದರ್ಶಿ ಜಾನ್, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಕೆ.ವೈ., ಜೆಸಿರೇಟ್ ಅಧ್ಯಕ್ಷೆ ಮೇರಿ ಕೆ., ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಶವಂತ ಗೌಡ, ನಿಡ್ಲೆ ಗಸ್ತು ಅರಣ್ಯಪಾಲಕ ಸುನಿಲ್ ನಾಯಕ್ ಹಾಗೂ ಕಳಂಜ ಗಸ್ತು ಅರಣ್ಯಪಾಲಕ ಸಚಿನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.



