










ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಮಹತ್ವದ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜುಲೈ 18, 2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳು (12ನೇ ತರಗತಿಯವರೆಗೆ) ರಜೆ ಘೋಷಿಸಿ ಆದೇಶಿಸಿದ್ದಾರೆ.
ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಜಿಲ್ಲಾಡಳಿತವು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚನೆಗಳನ್ನೂ ನೀಡಿದ್ದು, ಮಕ್ಕಳು ತಗ್ಗು ಪ್ರದೇಶಗಳು, ನದಿ, ಕೆರೆ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ವಿಶೇಷ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ.
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿರಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಹಾಗೂ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸಜ್ಜುಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪ್ರಾಕೃತಿಕ ವಿಕೋಪ ಸಂಬಂಧಿತ ತುರ್ತು ನೆರವಿಗಾಗಿ ಸಾರ್ವಜನಿಕರು ಜಿಲ್ಲಾಡಳಿತದ ಟೋಲ್ ಫ್ರೀ ಸಂಖ್ಯೆ 1077 ಅಥವಾ 0824-2442590 ಅನ್ನು ಸಂಪರ್ಕಿಸಬಹುದಾಗಿದೆ.



