ದ..ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.24(ಇಂದು) ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಶೇರ್ ಮಾಡಿ

 

ದ..ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಜು.24(ಇಂದು) ಶಾಲೆ–ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಇಂದು (ಜುಲೈ 24) ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಹವಾಮಾನ ಮುನ್ಸೂಚನೆ ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ವಸತಿ ಶಾಲೆಗಳು ಸೇರಿ), 12ನೇ ತರಗತಿವರೆಗಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳು (ವಸತಿ ಕಾಲೇಜುಗಳು ಸೇರಿ), ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು (ವಸತಿ ಕಾಲೇಜುಗಳು ಸೇರಿ)ಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾಡಳಿತವು ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಕಟಿಸಿದೆ. ಮಕ್ಕಳು ನೀರಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ಹಾಗೂ ಸಮುದ್ರ ತೀರಗಳಿಗೆ ತೆರಳುವುದನ್ನು ಸಂಪೂರ್ಣವಾಗಿ ತಪ್ಪಿಸುವಂತೆ ಮನವಿ ಮಾಡಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಆದೇಶಿಸಲಾಗಿದೆ. ಅಲ್ಲದೆ, ಪ್ರತಿಯೊಂದು ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲು ಸಂಬಂಧಿಸಿದ ಇಲಾಖೆಗಳಿಗೂ ನಿರ್ದೇಶನ ನೀಡಲಾಗಿದೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ತುರ್ತು ನೆರವು ಅಥವಾ ಮಾಹಿತಿಗಾಗಿ ಸಾರ್ವಜನಿಕರು ಜಿಲ್ಲಾ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿಯ ಟೋಲ್ ಫ್ರೀ ಸಂಖ್ಯೆ 1077 ಅಥವಾ 0824-2442590 ಅನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತ ತಿಳಿಸಿದೆ. ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ–2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

CALL NOW 8606485844

 

Leave a Reply

error: Content is protected !!