









ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಹತ್ವದ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹೊರಡಿಸಿರುವ ಪ್ರಕಟಣೆಯಂತೆ, ಜುಲೈ 25, 2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ವಸತಿ ಶಾಲೆಗಳು ಸೇರಿದಂತೆ), 12ನೇ ತರಗತಿವರೆಗಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳು (ವಸತಿ ಕಾಲೇಜುಗಳು ಸೇರಿದಂತೆ), ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ (ವಸತಿ ಕಾಲೇಜುಗಳು ಸೇರಿದಂತೆ) ರಜೆ ಘೋಷಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ–2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಜಿಲ್ಲಾಡಳಿತವು ಸಾರ್ವಜನಿಕರಿಗೆ ಹಲವು ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿದ್ದು, ಮಕ್ಕಳು ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿಗಳು ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ವಿಶೇಷ ನಿಗಾ ವಹಿಸುವಂತೆ ಮನವಿ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಪ್ರವಾಸಿಗರು ಹಾಗೂ ಸಾರ್ವಜನಿಕರು ಕೂಡ ನದಿ ಹಾಗೂ ಸಮುದ್ರ ತೀರಗಳಿಗೆ ತೆರಳಬಾರದು ಎಂದು ತಿಳಿಸಲಾಗಿದೆ.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಉಳಿದು ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ, ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಆದೇಶಿಸಲಾಗಿದೆ. ಅಲ್ಲದೆ, ಪ್ರತಿ ತಾಲೂಕಿನಲ್ಲೂ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ತುರ್ತು ಸಹಾಯಕ್ಕಾಗಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 1077 ಅಥವಾ 0824-2442590 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.



