“ಡಿವೈಡರ್ ಕೊಡಿ… ಇಲ್ಲವೇ ಹೋರಾಟ ಎದುರಿಸಿ!” – ಸರ್ಕಾರಕ್ಕೆ ಸಾರ್ವಜನಿಕರ ಖಡಕ್ ಎಚ್ಚರಿಕೆ

ಶೇರ್ ಮಾಡಿ

ಎನ್‌ಎಚ್-75 ಕಾಮಗಾರಿ ವಿರುದ್ಧ ಜನರ ಆಕ್ರೋಶ; ಕೆಎನ್‌ಆರ್ ಕಾಮಗಾರಿ ಸ್ಥಗಿತಗೊಳಿಸಿ ಬೃಹತ್ ಪ್ರತಿಭಟನೆ

ಸಾವಿರಾರು ವಿದ್ಯಾರ್ಥಿಗಳು, ಗ್ರಾಮಸ್ಥರು ನಿತ್ಯ ಪರದಾಟ – ಸಂಪರ್ಕ ರಸ್ತೆ, ಡಿವೈಡರ್ ನಿರ್ಮಿಸದಿದ್ದರೆ ಹತ್ತು ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ

 

"ಡಿವೈಡರ್ ಕೊಡಿ… ಇಲ್ಲವೇ ಹೋರಾಟ ಎದುರಿಸಿ!" – ಸರ್ಕಾರಕ್ಕೆ ಸಾರ್ವಜನಿಕರ ಖಡಕ್ ಎಚ್ಚರಿಕೆ

ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ–ಬಿ.ಸಿ.ರೋಡ್ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿ ಬಹುತೇಕ ಅಂತಿಮ ಹಂತ ತಲುಪಿದ್ದರೂ, ಕಾಮಗಾರಿಯ ಅವೈಜ್ಞಾನಿಕ ನಿರ್ವಹಣೆ ಮತ್ತು ಸಾರ್ವಜನಿಕರ ಮೂಲಭೂತ ಅಗತ್ಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ಕ್ರಮದ ವಿರುದ್ಧ ಇದೀಗ ಜನರ ಆಕ್ರೋಶ ಭುಗಿಲೆದ್ದಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಜನವಸತಿ ಪ್ರದೇಶಗಳು, ವಿದ್ಯಾಸಂಸ್ಥೆಗಳು ಹಾಗೂ ಗ್ರಾಮೀಣ ಸಂಪರ್ಕ ರಸ್ತೆಗಳ ಅಗತ್ಯವನ್ನೇ ಪರಿಗಣಿಸದೆ ಕಾಮಗಾರಿ ನಡೆಸಿರುವುದರಿಂದ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಾಹನ ಸವಾರರು ಪ್ರತಿನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ.

ಈ ಹಿನ್ನೆಲೆಯಲ್ಲಿ ಭಾನುವಾರ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರು, ಸ್ಥಳೀಯರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಸೇರಿ ಕೆಎನ್‌ಆರ್ ಕಂಪನಿ ನಡೆಸುತ್ತಿದ್ದ ಹೆದ್ದಾರಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಸರ್ಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, “ಜನರ ಬದುಕಿಗೆ ಅನುಕೂಲವಾಗದ ರಸ್ತೆ ಅಭಿವೃದ್ಧಿ ಯಾವ ಪ್ರಯೋಜನ?” ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ಹೆದ್ದಾರಿ ಕಾಮಗಾರಿ ಆರಂಭವಾದ ದಿನದಿಂದಲೂ ಸ್ಥಳೀಯರ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು, ಗುತ್ತಿಗೆದಾರರು ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಜನರನ್ನು ನಿರ್ಲಕ್ಷಿಸಿರುವುದು ಅತ್ಯಂತ ಬೇಸರದ ಸಂಗತಿ ಎಂದು ಆರೋಪಿಸಿದರು.

ಅಡ್ಡಹೊಳೆ–ಬಿ.ಸಿ.ರೋಡ್ ಹೆದ್ದಾರಿಯ ಹಲವು ಭಾಗಗಳಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಲು ಅಗತ್ಯವಿರುವ ಸಂಪರ್ಕ ರಸ್ತೆ ಅಥವಾ ಡಿವೈಡರ್ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಇದರ ಪರಿಣಾಮವಾಗಿ ರಸ್ತೆ ದಾಟಬೇಕಾದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸುಮಾರು ಎರಡೂವರೆ ಕಿಲೋಮೀಟರ್‌ಗಳಷ್ಟು ದೂರ ಸುತ್ತು ಹಾಕಿ ತೆರಳುವ ದುಸ್ಥಿತಿ ಎದುರಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ ಸೇರಿದಂತೆ ತುರ್ತು ಸೇವೆಗಳಿಗೂ ಇದು ದೊಡ್ಡ ಅಡಚಣೆಯಾಗಿ ಪರಿಣಮಿಸಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ವಿಶೇಷವಾಗಿ ಪೈಚಾರ್‌ನಿಂದ ದಿಡುಪೆಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಈ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ. ಇದೇ ಮಾರ್ಗದ ಮೂಲಕ ಐದುಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಿಗೆ ವಿವಿಧ ಗ್ರಾಮಗಳಿಂದ ಪ್ರತಿನಿತ್ಯ ಸಾವಿರಾರು ವಿದ್ಯಾರ್ಥಿಗಳು ಆಗಮಿಸುತ್ತಾರೆ. ಆದರೆ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಸಾರ್ವಜನಿಕರ ಸಂಚಾರದ ಅಗತ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿ ಹೆದ್ದಾರಿ ನಿರ್ಮಿಸಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದಲ್ಲದೆ ಮಾದೇರಿ, ಕೊಲ್ಯೊಟ್ಟು, ಮೊರಂಕಾಲ, ಪಡ್ಡಡ್ಕ, ಬೆಥನಿ ಸೇರಿದಂತೆ ಅನೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸರ್ವಿಸ್ ರಸ್ತೆಗಳಿಗೂ ಸಮರ್ಪಕ ಸಂಪರ್ಕ ರಸ್ತೆಯನ್ನು ನಿರ್ಮಿಸಿಲ್ಲ. ಪರಿಣಾಮವಾಗಿ ಗ್ರಾಮಸ್ಥರು ತಮ್ಮದೇ ಊರಿಗೆ ಹೋಗಲು ಅನಗತ್ಯವಾಗಿ ಹಲವು ಕಿಲೋಮೀಟರ್ ಸುತ್ತು ಹಾಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಜನರ ದೈನಂದಿನ ಬದುಕನ್ನೇ ದುಸ್ತರಗೊಳಿಸಿರುವ ಕಾಮಗಾರಿ ಇದಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದ ಮುಖಂಡರು, ಹತ್ತು ದಿನಗಳ ಒಳಗೆ ಸ್ಥಳ ಪರಿಶೀಲನೆ ನಡೆಸಿ ಸಂಪರ್ಕ ರಸ್ತೆಗಳು, ಅಗತ್ಯ ಡಿವೈಡರ್‌ಗಳು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ಕುರಿತು ಸ್ಪಷ್ಟ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸುವುದಾಗಿ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ನೆಲ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮೊಹಮ್ಮದ್ ಇಕ್ಬಾಲ್, ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರವಿಚಂದ್ರ ಹೊಸವಕ್ಲು, ಬೆಥನಿ ವಿದ್ಯಾ ಸಂಸ್ಥೆಯ ಸಂಚಾಲಕ ಡಾ.ವರ್ಗೀಸ್ ಕೈಪನಡ್ಕ, ಜೋಸ್ ಮಾತಾ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಲಾಂ ಬಿಲಾಲ್, ಉದ್ಯಮಿಗಳಾದ ಶಿಬು ವರ್ಗೀಸ್, ಗಣೇಶ್ ಪೂಜಾರಿ, ವಿ.ಜೆ.ಜೋಸೆಫ್, ನೆಲ್ಯಾಡಿ–ಕೌಕ್ರಾಡಿ ವರ್ತಕ ಮತ್ತು ಕೈಗಾರಿಕಾ ಸಂಘದ ಗೌರವಾಧ್ಯಕ್ಷ ರಫೀಕ್ ಸೀಗಲ್, ನೆಲ್ಯಾಡಿ ಆಟೋ ಚಾಲಕ ಮಾಲಕರ ಸಂಘದ ಕಾರ್ಯದರ್ಶಿ ಹಾರಿಸ್ ಸೇರಿದಂತೆ ಹಲವು ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಪಾರ ಸಂಖ್ಯೆಯ ಫಲಾನುಭವಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

CALL NOW 8606485844

 

Leave a Reply

error: Content is protected !!