










ನೆಲ್ಯಾಡಿ : ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆದಿಂದ ಬಿ.ಸಿ.ರೋಡಿನವರೆಗೆ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿ ಅಂತಿಮ ಹಂತ ತಲುಪಿರುವ ನಡುವೆಯೇ ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರದ ಅನುಕೂಲತೆಯನ್ನು ಕಡೆಗಣಿಸಿರುವ ಆರೋಪಗಳು ಕೇಳಿಬರುತ್ತಿವೆ. ಹೆದ್ದಾರಿಯುದ್ದಕ್ಕೂ ಜನವಸತಿ ಪ್ರದೇಶಗಳು, ಶಾಲಾ-ಕಾಲೇಜುಗಳು ಹಾಗೂ ಪ್ರಮುಖ ಸಂಪರ್ಕ ರಸ್ತೆಗಳ ಬಳಿ ಅಗತ್ಯವಿರುವ ಡಿವೈಡರ್, ಯು-ಟರ್ನ್ ಮತ್ತು ಸುರಕ್ಷಿತ ರಸ್ತೆ ದಾಟುವ ವ್ಯವಸ್ಥೆಗಳನ್ನು ಕಲ್ಪಿಸದೇ ಕಾಮಗಾರಿ ನಡೆಸಲಾಗಿದೆ ಎಂಬ ಕಾರಣಕ್ಕೆ ಹಲವು ಕಡೆ ಪ್ರತಿಭಟನೆಗಳು, ಮನವಿ ಸಲ್ಲಿಕೆಗಳು ನಡೆಯುತ್ತಿವೆ.
ಈ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ಮಂಗಳವಾರ ನೆಲ್ಯಾಡಿಗೆ ಭೇಟಿ ನೀಡಿ ಸ್ಥಳದಲ್ಲೇ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ಗಳು ಹಾಗೂ ಕಾಮಗಾರಿ ನಿರ್ವಹಿಸುತ್ತಿರುವ ಕೆಎನ್‌ಆರ್ ಕಂಪನಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿಕೊಂಡು ಸಾರ್ವಜನಿಕರ ಸಮ್ಮುಖದಲ್ಲೇ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು.
ಶಾಸಕಿ ಅವರು ಮಣ್ಣಗುಂಡಿ, ನೆಲ್ಯಾಡಿಯಲ್ಲಿರುವ ವಿವಿಧ ವಿದ್ಯಾಸಂಸ್ಥೆಗಳ ಮುಂಭಾಗ, ಗೋಳಿತೊಟ್ಟು ನಲ್ಲಿ ಕೊಕ್ಕಡ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ಜಂಕ್ಷನ್ ಸೇರಿದಂತೆ ಅಪಾಯದ ಸಾಧ್ಯತೆ ಹೆಚ್ಚಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರು ಪ್ರತಿನಿತ್ಯ ಎದುರಿಸುತ್ತಿರುವ ರಸ್ತೆ ದಾಟುವ ಸಮಸ್ಯೆ, ವಾಹನಗಳ ವೇಗ, ಡಿವೈಡರ್ ಕೊರತೆ, ಸುರಕ್ಷಿತ ತಿರುವುಗಳ ಅಭಾವ ಹಾಗೂ ಸಂಪರ್ಕ ರಸ್ತೆಗಳ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ ಸಾರ್ವಜನಿಕರ ಸುರಕ್ಷತೆ ಮತ್ತು ಅನುಕೂಲತೆಗೆ ಸಂಬಂಧಿಸಿದ ಎಲ್ಲ ಬೇಡಿಕೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಮನಕ್ಕೆ ತಂದು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕೃತವಾಗಿ ಪತ್ರ ಬರೆಯಲಾಗುವುದು. ಜನರ ಜೀವಕ್ಕೆ ಅಪಾಯವಾಗುವಂತಹ ಯಾವುದೇ ಸಮಸ್ಯೆಯನ್ನು ನಿರ್ಲಕ್ಷಿಸಲು ಅವಕಾಶ ನೀಡುವುದಿಲ್ಲ. ಅಗತ್ಯವಿರುವ ಕಡೆ ಡಿವೈಡರ್, ಯು-ಟರ್ನ್ ಹಾಗೂ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸುವ ಕುರಿತು ಪ್ರಾಧಿಕಾರದಿಂದ ಶೀಘ್ರ ಕ್ರಮವಾಗಬೇಕು ಎಂದು ತಿಳಿಸಿದರು.
ಸ್ಥಳ ಪರಿಶೀಲನೆ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಹಾಗೂ ಕೆಎನ್‌ಆರ್ ಕಂಪನಿಯ ಮ್ಯಾನೇಜರ್ ರಘುನಾಥ ರೆಡ್ಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಪ್ರಸಾದ್ ಬಲ್ಯ, ಕೌಕ್ರಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ಕೆ. ಇಬ್ರಾಹಿಂ, ಗ್ರಾಮ ಪಂಚಾಯತ್ ಸದಸ್ಯ ಸುಧಾಕರ, ಮಹೇಶ್ ಪಟ್ಲಡ್ಕ, ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರವಿಚಂದ್ರ ಹೊಸವಕ್ಲು, ನೆಲ್ಯಾಡಿ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಅಧ್ಯಕ್ಷ ರವಿಪ್ರಸಾದ್ ಸೇರಿದಂತೆ ಹಲವು ಸಾರ್ವಜನಿಕರು ಉಪಸ್ಥಿತರಿದರು.



