ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಎಸ್.ಡಿ. ಶೆಟ್ಟಿ ನಿಧನ

ಶೇರ್ ಮಾಡಿ

 

ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಎಸ್.ಡಿ. ಶೆಟ್ಟಿ ನಿಧನ

ಉಜಿರೆ: ಕನ್ನಡ ಸಾಹಿತ್ಯ, ಸಂಶೋಧನೆ ಹಾಗೂ ಶಿಲಾಶಾಸನ ಅಧ್ಯಯನ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ವಿದ್ವಾಂಸ, ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಎಸ್.ಡಿ.ಶೆಟ್ಟಿ (80) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಹಳದೀಪುರದ ಸಾಲೆಕೇರಿ ನಿವಾಸಿಯಾಗಿದ್ದ ಅವರು, ಕರ್ನಾಟಕ ವಿಶ್ವವಿದ್ಯಾಲಯದಿಂದ 1971ರಲ್ಲಿ ಕನ್ನಡ ಎಂ.ಎ. ಪದವಿ ಪಡೆದು ಶಿಕ್ಷಣ ಕ್ಷೇತ್ರಕ್ಕೆ ಪ್ರವೇಶಿಸಿದ್ದರು. ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಸುಮಾರು 35 ವರ್ಷಗಳ ಕಾಲ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವರು, ವಿಭಾಗದ ರೀಡರ್, ಪ್ರಾಧ್ಯಾಪಕ ಹಾಗೂ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು.

ನಿವೃತ್ತಿಯ ಬಳಿಕವೂ ಸಂಶೋಧನಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು, ಉಜಿರೆಯ ಡಾ.ಹಾ.ಮಾ.ನಾ.ಸಂಶೋಧನ ಕೇಂದ್ರದ ನಿರ್ದೇಶಕರಾಗಿ, ಎಸ್.ಡಿ.ಎಂ. ಪ್ರಕಾಶನಮಾಲೆಯ ವ್ಯವಸ್ಥಾಪಕರಾಗಿ, ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನ ಪ್ರತಿಷ್ಠಾನ ಹಾಗೂ ಮಂಜೂಷಾ ವಸ್ತುಸಂಗ್ರಹಾಲಯದ ನಿರ್ದೇಶಕರಾಗಿ ಗಮನಾರ್ಹ ಸೇವೆ ಸಲ್ಲಿಸಿದ್ದರು.

ಜೈನಧರ್ಮ, ಶಿಲಾಶಾಸನಗಳು, ಇತಿಹಾಸ ಹಾಗೂ ಸಾಹಿತ್ಯ ಸಂಶೋಧನೆ ಕುರಿತಾಗಿ ಅನೇಕ ಮೌಲಿಕ ಕೃತಿಗಳನ್ನು ರಚಿಸಿದ್ದ ಅವರು, ಉತ್ತಮ ವಾಗ್ಮಿ, ಸಂಶೋಧಕ ಹಾಗೂ ಲೇಖಕರಾಗಿಯೂ ಚಿರಪರಿಚಿತರಾಗಿದ್ದರು. ಹಿತ-ಮಿತ ಮಾತು, ಶಿಸ್ತುಬದ್ಧ ವ್ಯಕ್ತಿತ್ವ ಹಾಗೂ ಸರಳ ಜೀವನಶೈಲಿಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರು, ಅನೇಕ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿಚಾರ ಸಂಕಿರಣಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಂಶೋಧನಾ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದರು.

ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಅವರ ಅಂತ್ಯಸಂಸ್ಕಾರವು ಗುರುವಾರ ಉಜಿರೆಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಡಾ.ಎಸ್.ಡಿ.ಶೆಟ್ಟಿ ಅವರ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಜೈನಧರ್ಮ, ಕಲೆ, ಸಾಹಿತ್ಯ ಸಂಶೋಧನೆ ಹಾಗೂ ಶಾಸನಗಳ ಕುರಿತು ಆಳವಾದ ಅಧ್ಯಯನ ನಡೆಸಿದ ಅಪರೂಪದ ವಿದ್ವಾಂಸರಾಗಿದ್ದ ಡಾ.ಶೆಟ್ಟಿ ಅವರು ಎಸ್.ಡಿ.ಎಂ. ಕಾಲೇಜಿನ ಕನ್ನಡ ಉಪನ್ಯಾಸಕರಾಗಿ, ಮಂಜೂಷಾ ವಸ್ತುಸಂಗ್ರಹಾಲಯದ ನಿರ್ದೇಶಕರಾಗಿ, ಶ್ರೀ ಮಂಜುನಾಥೇಶ್ವರ ಪುಸ್ತಕ ಪ್ರಕಾಶನಮಾಲೆಯ ವ್ಯವಸ್ಥಾಪಕರಾಗಿ ಹಾಗೂ ಡಾ. ಹಾ.ಮಾ.ನಾ. ಸಂಶೋಧನ ಕೇಂದ್ರದ ನಿರ್ದೇಶಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದ್ದಾರೆ.

ನಮ್ಮ ಗ್ರಂಥಾಲಯಕ್ಕೆ ಅಪೂರ್ವ ತಾಳೆಪ್ರತಿಗಳ ಸಂಗ್ರಹ ಮಾಡುವುದರ ಜೊತೆಗೆ, ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ದೂರದ ಊರುಗಳಿಂದ ಐತಿಹಾಸಿಕ ಮಹತ್ವದ ವಸ್ತುಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ಅವರು ವಿಶಿಷ್ಟ ಪಾತ್ರ ವಹಿಸಿದ್ದರು. ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಪರಮಾತ್ಮನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆ ನೀಡಲಿ ಎಂದು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಾ. ಹೆಗ್ಗಡೆ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

 

Leave a Reply

error: Content is protected !!