









ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಮುಂದಿನ ದಿನಗಳಲ್ಲೂ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 4, 2026ರಂದು ಜಿಲ್ಲೆಯ ವಿವಿಧ ತಾಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯನ್ನು ಆಧರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಆದೇಶದಂತೆ ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10ನೇ ತರಗತಿವರೆಗೆ) ಹಾಗೂ ಎಲ್ಲಾ ವಸತಿ ಶಾಲೆಗಳಿಗೆ ಆಗಸ್ಟ್ 4ರಂದು ರಜೆ ಘೋಷಿಸಲಾಗಿದೆ. ಇದೇ ವೇಳೆ ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ (12ನೇ ತರಗತಿವರೆಗೆ) ಮತ್ತು ಎಲ್ಲಾ ವಸತಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.



