






ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ಸಂದರ್ಭದಲ್ಲಿ ವಿಬಿಜಿ ರಾಮ್ ಜಿ ಯೋಜನೆಯ ವಿಶೇಷ ಗ್ರಾಮ ಸಭೆ ಹಾಗೂ ಜಿಪಿಡಿಪಿ ಯೋಜನೆಯ ಗ್ರಾಮ ಸಭೆಯನ್ನೂ ಆಯೋಜಿಸಲಾಯಿತು.
ಪಂಚಾಯತ್ ಆಡಳಿತಾಧಿಕಾರಿ ಭರತ್ ಎಲ್. ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಅವರು ಸ್ವಚ್ಛತೆ, ಆರೋಗ್ಯ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ಯಾಜ್ಯ ನಿರ್ವಹಣೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿ-ಮುಂಗಟ್ಟುಗಳಿಂದ ಈಗಾಗಲೇ ಒಣ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಒಣ ಕಸ ಸಂಗ್ರಹಣೆಗೆ ನಿಗದಿತ ಶುಲ್ಕ ವಿಧಿಸುವ ಕುರಿತು ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ, ಪಂಚಾಯಿತಿಯ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಗೆ ಸಹಕರಿಸುವಂತೆ ಅಂಗಡಿ ಮಾಲೀಕರು ಹಾಗೂ ಗ್ರಾಮಸ್ಥರಿಗೆ ಮನವಿ ಮಾಡಲಾಯಿತು.
ಸಭೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಗ್ರಾಮಸ್ಥರಿಗೆ ಅಗತ್ಯ ಮಾಹಿತಿ ನೀಡಲಾಯಿತು. ಯೋಜನೆಯಡಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು. ಇದೇ ವೇಳೆ ‘ನಮ್ಮ ಗ್ರಾಮ–ನಮ್ಮ ಯೋಜನೆ’ ಕುರಿತಾಗಿಯೂ ಸಭೆಗೆ ಮಾಹಿತಿ ನೀಡಲಾಯಿತು.
ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು, ಎಂ.ಬಿ.ಕೆ., ಎಲ್.ಸಿ.ಆರ್.ಪಿ. ಹಾಗೂ ಸಖಿಯರು, ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಂಗಡಿ ಮಾಲೀಕರು ಮತ್ತು ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.








































































































