






ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ಎಲ್. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆಯ ವಿಶೇಷ ಗ್ರಾಮ ಸಭೆ ಹಾಗೂ ಜಿಪಿಡಿಪಿ ಯೋಜನೆಯ ಗ್ರಾಮ ಸಭೆ ನಡೆಸಲಾಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಅವರು ಸ್ವಚ್ಛತೆ, ಆರೋಗ್ಯ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ಯಾಜ್ಯ ನಿರ್ವಹಣೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಭಾಗವಹಿಸಿದ್ದ ವರ್ತಕರೊಂದಿಗೆ ತ್ಯಾಜ್ಯ ನಿರ್ವಹಣೆ ಕುರಿತು ಚರ್ಚಿಸಿ, ಪ್ರತಿಯೊಬ್ಬರೂ ತಮ್ಮ ಅಂಗಡಿ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸೂಚಿಸಲಾಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ಅಂಗಡಿಯಿಂದ ಒಣ ಕಸ ಸಂಗ್ರಹಿಸುವ ಕುರಿತು ಅಂಗಡಿ ಮಾಲೀಕರ ಅಭಿಪ್ರಾಯಗಳನ್ನು ಪಡೆದುಕೊಳ್ಳಲಾಯಿತು. ತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ ವಿಲೇವಾರಿ ಮಾಡುವ ಅಗತ್ಯದ ಕುರಿತು ಜಾಗೃತಿ ಮೂಡಿಸಲಾಯಿತು.
ಇದೇ ವೇಳೆ ಗ್ರಾಮಸ್ಥರಿಗೆ ವಿಬಿಜಿ ರಾಮ್ ಜಿ ಯೋಜನೆ ಕುರಿತು ಮಾಹಿತಿ ನೀಡಲಾಗಿದ್ದು, ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು. ‘ನಮ್ಮ ಗ್ರಾಮ ನಮ್ಮ ಯೋಜನೆ’ ಕುರಿತಂತೆಯೂ ಸಭೆಯಲ್ಲಿ ಮಾಹಿತಿ ನೀಡಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಎಂ.ಬಿ.ಕೆ., ಎಲ್.ಸಿ.ಆರ್.ಪಿ. ಹಾಗೂ ವಿವಿಧ ಸಖಿಯರು, ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿ ಮಾಲೀಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಬಳಿಕ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.








































































































