






ನೆಲ್ಯಾಡಿ: ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೆಲ್ಯಾಡಿ-ಕೌಕ್ರಾಡಿ ಗ್ರಾಮ ಸಮಿತಿಯ ವತಿಯಿಂದ ನೆಲ್ಯಾಡಿ ಪೇಟೆಯಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಅವರು ಎಸ್ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆಯಾಗಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಹಾಗೂ ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಎಸ್ಐಆರ್ ರದ್ದುಗೊಳಿಸಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೇಶದ ರಾಜಧಾನಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ಕೋಕ್ರೋಚ್ ಜನತಾ ಪಾರ್ಟಿ ಹಾಗೂ ವಿದ್ಯಾರ್ಥಿ ಸಂಘಟನೆಗಳ ನಾಯಕರು ಮತ್ತು ಹೋರಾಟಗಾರರ ಮೇಲಿನ ದಮನಕಾರಿ ಕ್ರಮಗಳು ಮತ್ತು ಕಾನೂನುಬಾಹಿರ ಬಂಧನಗಳ ಆರೋಪಗಳ ಕುರಿತು ನ್ಯಾಯಸಮ್ಮತ ತನಿಖೆ ನಡೆಸಬೇಕು. ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸುವುದರ ಜೊತೆಗೆ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನಬದ್ಧ ಹಕ್ಕುಗಳನ್ನು ಕಾಪಾಡಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.
ನೆಲ್ಯಾಡಿ-ಕೌಕ್ರಾಡಿ ಗ್ರಾಮ ಸಮಿತಿಯ ಕಾರ್ಯದರ್ಶಿ ಸಿದ್ದೀಕ್ ಎಂ. ಸ್ವಾಗತಿಸಿದರು, ಗ್ರಾಮ ಸಮಿತಿಯ ಅಧ್ಯಕ್ಷ ಸಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಎಸ್ಡಿಪಿಐ ಕಡಬ- ಉಪ್ಪಿನಂಗಡಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಎನ್. ಉಪಸ್ಥಿತರಿದ್ದರು. ನೆಲ್ಯಾಡಿ ಗ್ರಾಮ ಸಮಿತಿ ಸದಸ್ಯ ಮುಹಮ್ಮದ್ ರಫೀಕ್ ಅಪ್ಪಿ ಕಾರ್ಯಕ್ರಮ ನಿರೂಪಿಸಿದರು.








































































































