


ವಿಟ್ಲ: ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ನಲ್ಲಿರುವ ಮೈದಾನದಲ್ಲಿ ಪಟಾಕಿ ಅಂಗಡಿಯ ಬಳಿ ನಿಂತಿದ್ದ ವ್ಯಕ್ತಿಯ ಮೇಲೆ ಬೊಲೆರೋ ವಾಹನ ಹರಿಸಿ ಕೊಲೆಗೆ ಯತ್ನಿಸಿದ ಆರೋಪದಡಿ ಜಗದೀಶ್ ಜೈನ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮಾಣಿ ನಿವಾಸಿ ವಿಕೇಶ್ ಕೆ. (32) ಎಂಬವರು ನೀಡಿದ ದೂರಿನಂತೆ, ನ.9ರಂದು ಸಂಜೆ ಈ ಘಟನೆ ನಡೆದಿದೆ. ವಿಕೇಶ್ ಅವರು ಮಾಣಿ ಜಂಕ್ಷನ್ನಲ್ಲಿರುವ ಮೈದಾನದ ಪಟಾಕಿ ಅಂಗಡಿಯ ಬಳಿ ನಿಂತಿದ್ದ ಸಂದರ್ಭದಲ್ಲಿ, ಅವರಿಗೆ ಪರಿಚಯವಿರುವ ಜಗದೀಶ್ ಜೈನ್ ಎಂಬಾತ ಬೊಲೆರೋ ವಾಹನವನ್ನು ಅತಿವೇಗವಾಗಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆಯಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಈ ವೇಳೆ ಅಪಾಯವನ್ನು ಅರಿತ ವಿಕೇಶ್ ಅವರು ಬೊಲೆರೋ ವಾಹನದ ಬಾನೆಟ್ ಮೇಲೆ ಹಾರಿ, ಬಳಿಕ ಅಲ್ಲಿಯೇ ಇದ್ದ ಮಣ್ಣಿನ ಮೇಲೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರ ಎಡಕಾಲಿನ ಮೊಣಗಂಟಿಗೆ ಗುದ್ದಿದ ಗಾಯವಾಗಿದೆ. ಇದೇ ಸಂದರ್ಭದಲ್ಲಿ ವಿಕೇಶ್ ಅವರ ಸಂಬಂಧಿಕ ತೀರ್ಥಪ್ರಸಾದ್ ಅವರಿಗೂ ವಾಹನದಿಂದ ಡಿಕ್ಕಿ ಹೊಡೆಯಲು ಆರೋಪಿ ಯತ್ನಿಸಿದ್ದು, ಅವರು ಕೂಡ ತಪ್ಪಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನಾ ಸ್ಥಳದಲ್ಲಿ ಜನರು ಸೇರುತ್ತಿರುವುದನ್ನು ಗಮನಿಸಿದ ಆರೋಪಿ, ವಿಕೇಶ್ ಅವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮುಂದಕ್ಕೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಸ್ಥಳದಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 232/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 109, 118(1), 352 ಹಾಗೂ 351(2)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ತನಿಖೆ ಕೈಗೊಂಡ ವಿಟ್ಲ ಪೊಲೀಸರು ಆರೋಪಿ ಜಗದೀಶ್ ಜೈನ್ನನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.








































































































