ಅಭಿವೃದ್ಧಿ, ಗ್ಯಾರಂಟಿ ಯೋಜನೆ ಹಾಗೂ ರೈತರ ಪರ ಸರ್ಕಾರದ ನಿಲುವು ಪ್ರಶ್ನಿಸುವ ನೈತಿಕತೆ ಬಿಜೆಪಿಗಿಲ್ಲ; ಜನಪರ ಆಡಳಿತಕ್ಕೆ ಸಹಕರಿಸಿ – ಕಾಂಗ್ರೆಸ್ ಮುಖಂಡರ ಆಗ್ರಹ
ಕಡಬ: ರಾಜ್ಯದ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ರೈತರ ಪರವಾಗಿ ಕೈಗೊಂಡಿರುವ ನಿರ್ಧಾರಗಳನ್ನು ವಿರೋಧಿಸುವ ಉದ್ದೇಶದಿಂದ ಬಿಜೆಪಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುತ್ತಿದೆ. ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಘೋಷಣೆಯ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಿ, ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ರಾಜಕೀಯ ನಾಟಕವನ್ನು ಬಿಜೆಪಿ ನಡೆಸುತ್ತಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಆರೋಪಿಸಿದರು.
ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವದ ಆಶಯಗಳಿಗೆ ಸದಾ ಬದ್ಧವಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಜೊತೆಗೆ ಯಾವುದೇ ಕೋಮು ಗಲಭೆಗಳಿಗೆ ಅವಕಾಶ ನೀಡದೆ ಶಾಂತಿ ಮತ್ತು ಸೌಹಾರ್ದತೆಯನ್ನು ಉಳಿಸಲು ಶ್ರಮಿಸುತ್ತಿದೆ ಎಂದರು.
ಕಾಂಗ್ರೆಸ್ ಸರ್ಕಾರ ಬಡವರು, ರೈತರು ಹಾಗೂ ಸಾಮಾನ್ಯ ಜನರ ಪರವಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಐದು ಗ್ಯಾರಂಟಿ ಯೋಜನೆಗಳೇ ಸಾಕ್ಷಿಯಾಗಿವೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಹೈನುಗಾರಿಕೆಯನ್ನು ಅವಲಂಬಿಸಿರುವ ಲಕ್ಷಾಂತರ ರೈತರ ಬದುಕಿಗೆ ಆರ್ಥಿಕ ಬಲ ತುಂಬುವ ಉದ್ದೇಶದಿಂದ ಹಾಲಿನ ಪ್ರೋತ್ಸಾಹಧನವನ್ನು ಹೆಚ್ಚಿಸಲಾಗಿದೆ. ರೈತರ ಹಿತದೃಷ್ಟಿಯಿಂದ ಕೈಗೊಂಡಿರುವ ಇಂತಹ ಜನಪರ ನಿರ್ಧಾರಗಳನ್ನು ವಿರೋಧಿಸುವ ಬಿಜೆಪಿಯ ನಡೆ ವಿಪರ್ಯಾಸ ಎಂದು ಟೀಕಿಸಿದರು.
ದೇಶದಲ್ಲಿ ಮತದಾನದ ಹಕ್ಕಿನ ಪಾವಿತ್ರ್ಯತೆ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ‘ವೋಟ್ ಚೋರಿ’ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳುವಂತೆ ದೇಶಾದ್ಯಂತ ಜನಜಾಗೃತಿ ಮೂಡಿಸಲಾಗುತ್ತಿದೆ. ಈ ಹೋರಾಟದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಬಿಜೆಪಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿಭಟನೆಗಳನ್ನು ಆಯೋಜಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ರಾಜ್ಯ ಸರ್ಕಾರದ ಅನುದಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಬಿಜೆಪಿ ಶಾಸಕರೇ ಶಂಕುಸ್ಥಾಪನೆ ನೆರವೇರಿಸುತ್ತಿದ್ದರೂ, ಮತ್ತೊಂದೆಡೆ ರಾಜ್ಯ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಜನರಲ್ಲಿ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರವೇ ಅನುದಾನ ಒದಗಿಸುತ್ತಿದ್ದು, ಅದರ ಪ್ರಯೋಜನ ಜನರಿಗೆ ತಲುಪಿಸುವ ಕಾರ್ಯ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುವ ಬದಲು ರಾಜಕೀಯ ಉದ್ದೇಶದಿಂದ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು.
ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಜನರನ್ನು ಗೊಂದಲಕ್ಕೀಡು ಮಾಡುವ ಪ್ರತಿಭಟನೆಗಳನ್ನು ಬದಿಗಿಟ್ಟು ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕು. ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನಗಳಿಗೆ ಅವಕಾಶ ನೀಡದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜನಪರ ರಾಜಕಾರಣ ಮಾಡಬೇಕು. ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಮತ್ತು ಜನಕಲ್ಯಾಣದ ಪರವಾಗಿ ಸದಾ ನಿಲ್ಲಲಿದೆ ಎಂದು ಮುಖಂಡರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಪಿ. ವರ್ಗೀಸ್, ಕಡಬ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷ ಶರೀಫ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಕ್ಸೇವಿಯರ್ ಬೇಬಿ, ಪ್ರಧಾನ ಕಾರ್ಯದರ್ಶಿ ಸತೀಶ್ ನಾಯ್ಕ್, ಕಾಂಗ್ರೆಸ್ ಮುಖಂಡರಾದ ಹನೀಫ್ ಹಾಜಿ, ಅಶ್ರಫ್ ಶೇಡಿಗುಂಡಿ ಹಾಗೂ ಎಸ್ಸಿ ಘಟಕದ ಮುಖಂಡ ವಸಂತ ಕುಬಲಾಡಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.