


ನೆಲ್ಯಾಡಿ: ರಾಜ್ಯದ ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ನೂತನ ನಿರ್ದೇಶಕರನ್ನು ನೇಮಕ ಮಾಡಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದ್ದು, ಕಡಬ ತಾಲೂಕಿನ ನೆಲ್ಯಾಡಿ ನಿವಾಸಿ, ಕಾಂಗ್ರೆಸ್ ಮುಖಂಡ ಸರ್ವೋತ್ತಮ ಗೌಡ ಅವರಿಗೆ ಮಹತ್ವದ ಜವಾಬ್ದಾರಿ ಲಭಿಸಿದೆ.
ಸರ್ವೋತ್ತಮ ಗೌಡ ಅವರನ್ನು ಕರ್ನಾಟಕ ರಾಜ್ಯ ಮ್ಯಾಂಗೋ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿಯ ಮೂಲಕ ಅವರಿಗೆ ರಾಜ್ಯಮಟ್ಟದಲ್ಲಿ ಕಾರ್ಯನಿರ್ವಹಿಸುವ ಅವಕಾಶ ದೊರೆತಿದೆ.
ಸರ್ವೋತ್ತಮ ಗೌಡ ಅವರು ಈ ಹಿಂದೆ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ತಾಲೂಕು ಪಂಚಾಯಿತಿ ಸದಸ್ಯರಾಗಿ ಹಾಗೂ ನೆಲ್ಯಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಕೀಯ ಕ್ಷೇತ್ರದ ಜೊತೆಗೆ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸ್ಥಳೀಯವಾಗಿ ಗುರುತಿಸಿಕೊಂಡಿದ್ದಾರೆ.
ಗ್ರಾಮೀಣ ಭಾಗದ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅವರು ವಿವಿಧ ಜನಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ರಾಜ್ಯ ಸರಕಾರದಿಂದ ನಿಗಮದ ನಿರ್ದೇಶಕ ಸ್ಥಾನಕ್ಕೆ ನೇಮಕಗೊಂಡಿರುವುದು ನೆಲ್ಯಾಡಿ ಹಾಗೂ ಕಡಬ ತಾಲೂಕಿನ ಕಾಂಗ್ರೆಸ್ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ.








































































































