ನೆಲ್ಯಾಡಿ: ದಿನದಿಂದ ದಿನಕ್ಕೆ ಬೆಳೆಯುತ್ತಿರುವ ನೆಲ್ಯಾಡಿ ಪಟ್ಟಣದಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್ ಸಮಸ್ಯೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ನೆಲ್ಯಾಡಿ ಗ್ರಾಮ ಪಂಚಾಯಿತಿ ವತಿಯಿಂದ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಾಹನ ಚಾಲಕ-ಮಾಲಕರ ಸಭೆ ಗುರುವಾರ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ನೆಲ್ಯಾಡಿ ಪಟ್ಟಣದ ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಅವ್ಯವಸ್ಥಿತ ನಿಲುಗಡೆಯಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆ, ಸಾರ್ವಜನಿಕರು ಹಾಗೂ ವರ್ತಕರು ಎದುರಿಸುತ್ತಿರುವ ಸಮಸ್ಯೆಗಳು, ವಾಹನಗಳ ಸುಗಮ ಸಂಚಾರ ಮತ್ತು ಸುವ್ಯವಸ್ಥಿತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಕುರಿತು ಸುದೀರ್ಘ ಚರ್ಚೆ ನಡೆಯಿತು.
ವಿಶೇಷವಾಗಿ ರಿಕ್ಷಾ ಚಾಲಕ-ಮಾಲಕರು, ಜೀಪು ಚಾಲಕ-ಮಾಲಕರು ಹಾಗೂ ಟೆಂಪೋ ಚಾಲಕ-ಮಾಲಕರು ತಮ್ಮ ವಾಹನಗಳನ್ನು ನಿಲುಗಡೆ ಮಾಡಲು ಸೂಕ್ತ ಸ್ಥಳಾವಕಾಶವಿಲ್ಲದೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಗಮನ ಸೆಳೆಯಲಾಯಿತು. ವಾಹನ ಚಾಲಕರಿಗೆ ಅನುಕೂಲವಾಗುವಂತೆ ಸೂಕ್ತ ಪಾರ್ಕಿಂಗ್ ಸ್ಥಳ ಗುರುತಿಸುವುದು ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗದ ರೀತಿಯಲ್ಲಿ ವಾಹನಗಳ ನಿಲುಗಡೆ ವ್ಯವಸ್ಥೆ ರೂಪಿಸುವ ಕುರಿತು ಸಲಹೆ-ಸೂಚನೆಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.
ಅದೇ ರೀತಿ ನೆಲ್ಯಾಡಿ ಮೂಲಕ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳು ಕಡ್ಡಾಯವಾಗಿ ಡಿಪೋಗೆ ತೆರಳುವ ವ್ಯವಸ್ಥೆ ಕಲ್ಪಿಸುವುದು, ಬಸ್ಗಳ ಸಂಚಾರ ಹಾಗೂ ನಿಲುಗಡೆಯಿಂದ ಪಟ್ಟಣದೊಳಗೆ ಉಂಟಾಗುವ ಸಂಚಾರ ಸಮಸ್ಯೆಗಳನ್ನು ನಿಯಂತ್ರಿಸುವ ಕುರಿತು ಚರ್ಚಿಸಲಾಯಿತು.
ಇದರೊಂದಿಗೆ ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಎರಡೂ ಬದಿಗಳಲ್ಲಿ ನಿರ್ಮಿಸಲಾಗಿರುವ ಚರಂಡಿಗಳ ಅವೈಜ್ಞಾನಿಕ ವಿನ್ಯಾಸದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎದುರಿಸುತ್ತಿರುವ ತೊಂದರೆಗಳ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಚರಂಡಿ ವ್ಯವಸ್ಥೆಯಲ್ಲಿನ ನ್ಯೂನತೆಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ಕಂಡುಕೊಳ್ಳುವ ಅಗತ್ಯವನ್ನು ಒತ್ತಿಹೇಳಲಾಯಿತು.
ನೆಲ್ಯಾಡಿ ಪಟ್ಟಣದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಪಾರ್ಕಿಂಗ್ ಸಮಸ್ಯೆಯನ್ನು ಕೇವಲ ವಾಹನ ಚಾಲಕರ ಸಮಸ್ಯೆಯಾಗಿ ಪರಿಗಣಿಸದೆ, ವ್ಯಾಪಾರ ವಹಿವಾಟು, ಸಾರ್ವಜನಿಕರ ಓಡಾಟ ಮತ್ತು ಸುಗಮ ವಾಹನ ಸಂಚಾರಕ್ಕೆ ಸಂಬಂಧಿಸಿದ ಪ್ರಮುಖ ವಿಚಾರವಾಗಿ ಪರಿಗಣಿಸಿ, ಎಲ್ಲ ಸಂಘಟನೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಅವರು ನೆಲ್ಯಾಡಿ ವ್ಯಾಪ್ತಿಯ ಟ್ರಾಫಿಕ್ ಸಮಸ್ಯೆಯ ಸ್ವರೂಪ ಹಾಗೂ ಅದನ್ನು ನಿಯಂತ್ರಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವಿವರಿಸಿದರು. ಸಭೆಗೆ ಸ್ವಾಗತ ಕೋರಿ, ಬಳಿಕ ವಂದಿಸಿದರು.
ಸಭೆಯಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸರ್ವೋತ್ತಮ ಗೌಡ, ಬಾಲಕೃಷ್ಣ ಬಾಣಜಾಲು, ಮಾಜಿ ತಾಲೂಕು ಪಂಚಾಯಿತಿ ಸದಸ್ಯೆ ಉಷಾ ಅಂಚನ್, ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಸಲಾಂ ಬಿಲಾಲ್, ಕೌಕ್ರಾಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಇಬ್ರಾಹಿಂ ಎಂ.ಕೆ., ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಜಬ್ಬಾರ್, ನೆಲ್ಯಾಡಿ ಹೊರಠಾಣೆಯ ಪೊಲೀಸ್ ಅಧಿಕಾರಿಗಳಾದ ದಯಾನಂದ ಮತ್ತು ಶ್ರೀಧರ, ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಸಂತೋಷ್ ಹಾಗೂ ಸದಸ್ಯರು, ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್. ದುರ್ಗಾಶ್ರೀ, ಉಪಾಧ್ಯಕ್ಷ ನಾಝಿಂ ಸಾಹೇಬ್, ಕಾರ್ಯದರ್ಶಿ ಪ್ರಶಾಂತ್ ಸಿ.ಎಚ್., ಜೀಪು ಚಾಲಕ-ಮಾಲಕರ ಸಂಘದ ಅಧ್ಯಕ್ಷ ಶೇಖರ, ಟೆಂಪೋ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಹನೀಫ್ ಕರಾವಳಿ, ಇಂಜಿನಿಯರ್ ಟಿಟ್ಟಿ ಹಾಗೂ ವರ್ತಕರು ಉಪಸ್ಥಿತರಿದ್ದರು.