


ನೆಲ್ಯಾಡಿ: ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣವೊಂದರ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
2016ರ ಜುಲೈ 26ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸಮಜಲು ಎಂಬಲ್ಲಿ ಈ ಸುಲಿಗೆ ಘಟನೆ ನಡೆದಿತ್ತು. ಇಲ್ಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಶಿವಶಂಕರ್ ಶಾಸ್ತ್ರಿ ಅವರ ಮನೆಗೆ ನಾಲ್ವರು ಅಪರಿಚಿತರು ಚಿಕಿತ್ಸೆ ಪಡೆಯುವ ನೆಪದಲ್ಲಿ ಆಗಮಿಸಿದ್ದರು. ಬಳಿಕ ಮನೆಯಲ್ಲಿದ್ದ ಶಿವಶಂಕರ್ ಶಾಸ್ತ್ರಿ ಹಾಗೂ ಅವರ ಪತ್ನಿಯನ್ನು ಕಟ್ಟಿಹಾಕಿ, ಚಿನ್ನಾಭರಣ ಮತ್ತು ನಗದು ಸೇರಿದಂತೆ ಒಟ್ಟು ₹2,35,800 ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 187/2006, ಕಲಂ 395 ಮತ್ತು 397 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಮಾಕುಂಡಿ ನಿವಾಸಿ ಮಸೂದ್ @ ಮಸೂರ ಎಂಬಾತ ಸುಮಾರು 10 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೆಬಲ್ ನಂಜುಂಡಯ್ಯ ಹಾಗೂ ಪೊಲೀಸ್ ಕಾನ್ಸ್ಟೆಬಲ್ ಮ್ಯಾಥ್ಯು ವರ್ಗಿಸ್ ಅವರು ಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.








































































































