


ನೆಲ್ಯಾಡಿ: ಅಲ್ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ನೆರವು ಒದಗಿಸುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಅವರಿಗೆ ಸಂಸ್ಥೆಯ ವತಿಯಿಂದ ಮನವಿ ಸಲ್ಲಿಸಲಾಯಿತು.
ನೆಲ್ಯಾಡಿ ಗ್ರಾಮದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಶಾಲೆಯಲ್ಲಿ ಪ್ರಸ್ತುತ 250ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸೇರಿದವರಾಗಿದ್ದಾರೆ. ಇಂತಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಸಂಸ್ಥೆಯು ಹಲವು ವರ್ಷಗಳಿಂದ ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಆದರೆ ಶಾಲೆಯಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕೊರತೆಯಿದ್ದು, ಕಟ್ಟಡದ ಅಭಿವೃದ್ಧಿ, ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣ ಹಾಗೂ ಸುಧಾರಣಾ ಕಾರ್ಯಗಳಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ. ಸಂಸ್ಥೆಯು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದರಿಂದ ಶಾಲೆಯ ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಮುಂದುವರಿಸಲು ಸರ್ಕಾರದಿಂದ ಆರ್ಥಿಕ ಸಹಕಾರ ಒದಗಿಸಬೇಕೆಂದು ಮನವಿಯಲ್ಲಿ ವಿವರಿಸಲಾಗಿದೆ.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಅಧ್ಯಕ್ಷ ನಾಝಿಂ ಸಾಹೇಬ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹಾಗೂ ಕಾಂಗ್ರೆಸ್ ಮುಖಂಡ ನಝೀರ್ ಮಠ ಉಪಸ್ಥಿತರಿದ್ದರು.








































































































