


ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಂಗವಾಗಿ ಕೊಣಾಲು ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮೂರು ತಿಂಗಳ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು.
ಕೊಣಾಲು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಶಶಿಧರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪೂರಕವಾದ ಇಂತಹ ಉಚಿತ ತರಬೇತಿ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾಗಿವೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣಕ್ಕೆ ಪ್ರಮುಖ ಘಟ್ಟವಾಗಿದ್ದು, ಈ ಹಂತದಲ್ಲಿ ಸೂಕ್ತ ಮಾರ್ಗದರ್ಶನ, ನಿರಂತರ ಅಭ್ಯಾಸ ಹಾಗೂ ಶಿಕ್ಷಕರ ಸಹಕಾರ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಲು ನೆರವಾಗುತ್ತದೆ. ವಿದ್ಯಾರ್ಥಿಗಳು ತರಬೇತಿಯ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಫಲಿತಾಂಶ ಗಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.
ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರ ಸಬಲೀಕರಣದ ಜೊತೆಗೆ ಮಕ್ಕಳ ಶಿಕ್ಷಣ, ವ್ಯಕ್ತಿತ್ವ ವಿಕಸನ ಹಾಗೂ ಶೈಕ್ಷಣಿಕ ಪ್ರಗತಿಗೂ ಆದ್ಯತೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಹೆಚ್ಚಿನ ನೆರವು ನೀಡುವ ಉದ್ದೇಶದಿಂದ ಮೂರು ತಿಂಗಳ ಉಚಿತ ಟ್ಯೂಷನ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಶಿಸ್ತು, ಆಸಕ್ತಿ ಹಾಗೂ ನಿರಂತರ ಪರಿಶ್ರಮದೊಂದಿಗೆ ತರಬೇತಿಯಲ್ಲಿ ಪಾಲ್ಗೊಂಡು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಬೇಕು. ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ನೇಮಿರಾಜ, ವಲಯ ಮೇಲ್ವಿಚಾರಕಿ ಸುಜಾತ, ಸೇವಾ ಪ್ರತಿನಿಧಿ ಪ್ರತಿಮಾ, ತರಬೇತಿ ಶಿಕ್ಷಕಿ ಅಶ್ವಿನಿ, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








































































































