ಕಡಬದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ➤ನವೆಂಬರ್ 3 ಮತ್ತು4

ಶೇರ್ ಮಾಡಿ

ನೇಸರ ಸೆ.11: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಹಾಗೂ ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳು, ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಆಶ್ರಯದಲ್ಲಿ ಪರಿಸರ ಹಚ್ಚ ಹಸಿರು ಸಂಘಟಿತ ಕ್ರೀಡೆಗೆ ಉಸಿರು ಎನ್ನುವ ಧ್ಯೇಯವಾಕ್ಯದೊಂದಿಗೆ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ ಕ್ರೀಡಾ ಕೂಟ ಸೈಂಟ್ ಆನ್ಸ್ ಕ್ರೀಡಾ ನಿಸರ್ಗ 2022 ನವೆಂಬರ್ 3,4 ರಂದು ಕಡಬ ಸೈಂಟ್ ಜೋಕಿಮ್ಸ್ ಹಾಗೂ ಸೈಂಟ್ ಆನ್ಸ್ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಹೇಳಿದರು.


ಅವರು ಶನಿವಾರ ಕಡಬ ಸೈಂಟ್ ಆನ್ಸ್ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕ್ರೀಡಾಕೂಟದ ಯಶಸ್ಸಿಗೆ ಸಕಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿಸಲು ಸಂಘಟಿತ ಪ್ರಯತ್ನ ನಡೆಸಲಾಗುತ್ತಿದೆ ಎಂದರು. ಕ್ರೀಡಾಕೂಟದಲ್ಲಿ ಪರಿಸರದ ಬಗ್ಗೆ ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾಭಿಮಾನಿಗಳಿಗೆ ಕಾಳಜಿ ಉಂಟುಮಾಡುವ ಪ್ರಯತ್ನ ಮಾಡಲಾಗುತ್ತದೆ. ಕ್ರೀಡಾ ಕೂಟದಲ್ಲಿ ಆರು ವಿಭಾಗಗಳಲ್ಲಿ 74 ಸ್ಪರ್ಧೆಗಳು ನಡೆಯಲಿದ್ದು, ಪುತ್ತೂರು ಹಾಗೂ ಕಡಬ ತಾಲೂಕಿನ 800 ರಿಂದ 1100 ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ, ಕಡಬ, ಪುತ್ತೂರು ಗ್ರಾಮಾಂತರ, ಉಪ್ಪಿನಂಗಡಿ, ಸವಣೂರು ಈ ಐದು ಶೈಕ್ಷಣಿಕ ವಲಯಗಳಲ್ಲಿ ಅಕ್ಟೋಬರ್ 22 ರಂದು ವಲಯಮಟ್ಟದ ಕ್ರೀಡಾಕೂಟಗಳು ನಡೆಯಲಿದ್ದು, ಇದರಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಅರ್ಹತೆ ಪಡೆಯುತ್ತಾರೆ. ಕಾರ್ಯಕ್ರಮದ ಯಶಸ್ಸಿಗೆ ಪರಿಸರದ ಎಲ್ಲಾ ಸಂಘ ಸಂಸ್ಥೆಗಳು ಸಹಕಾರ ನೀಡಲಿವೆ. ಎರಡು ದಿನಗಳ ಸ್ಪರ್ಧೆ ನಡೆಯಲಿರುವುದರಿಂದ ಅವಶ್ಯವಿದ್ದಲ್ಲಿ ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಹೇಳಿದ ಸುಂದರ ಗೌಡ ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಕ್ಷೇತ್ರದ ಶಾಸಕ ಸಚಿವ ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಶಿಕ್ಷಣ ಇಲಾಖಾ ಉನ್ನತಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಹಾಯಕ ಆಯುಕ್ತರು, ತಹಶಿಲ್ದಾರು ಮತ್ತು ಇತರ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೈಂಟ್ ಆನ್ಸ್ ವಿದ್ಯಾ ಸಂಸ್ಥೆಯ ಪ್ರಿನ್ಸಿಪಾಲ್ ಫಾ.ಅಮಿತ್ ಪ್ರಕಾಶ್ ರೋಡ್ರಿಗಸ್, ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಮೋನಪ್ಪ, ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಾಮಚ್ಚನ್, ಪುತ್ತೂರು ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮ ಗೌಡ ಎಂ, ದ.ಕ ಜಿಲ್ಲಾ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಪಿ, ಪುತ್ತೂರು ತಾಲೂಕು ಪ್ರಾಥಮಿಕ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ನವಿನ್ ಕುಮಾರ್ ರೈ, ಕಡಬ ತಾಲೂಕು ಪ್ರಾಥಮಿಕ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ , ಸೈಂಟ್ ಆನ್ಸ್ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ , ಶಿಕ್ಷಕರದ ಸಮದ್ ಉಪಸ್ಥಿತರಿದ್ದರು.

Leave a Reply

error: Content is protected !!