ನೆಲ್ಯಾಡಿ: ಮಾನ್ಯ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣ ದಲ್ಲಿ ಅ.14ರಂದು ನಡೆದ ಸಭೆಯಲ್ಲಿ ರಾಜ್ಯ ಸರ್ಕಾರದ “ಪುಣ್ಯಕೋಟಿ ದತ್ತು” ಯೋಜನೆಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಇತರೆ ಸಂಸ್ಥೆಗಳ ನೌಕರರ ದೇಣಿಗೆ ನೀಡುವ ಒಪ್ಪಿಗೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಇದೇ ತಿಂಗಳಲ್ಲಿ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ವೇತನ ಸಮಿತಿ ಆಯೋಗ ರಚಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು ಹಾಗೂ ವೇತನ ಸಮಿತಿ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನ ಮಾಡುವ ಸಂದರ್ಭದಲ್ಲಿ ವೇತನ ಭತ್ಯೆಗಳ ಜೊತೆ ನೌಕರರಿಗೆ ಇನ್ಸೆಂಟೀವ್ ಸೌಲಭ್ಯಗಳನ್ನು ನೀಡುವ ಉದ್ದೇಶವನ್ನು ಹೊಂದಲಾಗಿದ್ದು, ಆ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಎನ್.ಪಿ.ಎಸ್. ರದ್ದುಪಡಿಸುವ ಬೇಡಿಕೆಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳು ಈ ಸಂಬಂಧ ಅನ್ಯ ರಾಜ್ಯಗಳಿಂದ ಮಾಹಿತಿಯನ್ನು ಸಂಗ್ರಹಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸ್ಪಷ್ಟ ಭರವಸೆಯನ್ನು ನೀಡಿರುತ್ತಾರೆ. ಇದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ.
ಸಭೆಯಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಎಸ್ ಬೊಮ್ಮಾಯಿ,
ಪಶುಸಂಗೋಪನ ಸಚಿವರಾದ ಪ್ರಭು ಚವ್ಹಾಣ್, ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿಗಳಾದ ಶ್ರೀಮತಿ ಸಲ್ಮಾ, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ, ಕಾರ್ಯಧ್ಯಕ್ಷರಾದ ಮಲ್ಲಿಕಾರ್ಜುನ ಬಿ.ಬಳ್ಳಾರಿ, ಗೌರವಾಧ್ಯಕ್ಷರಾದ ವೆಂಕಟೇಶಯ್ಯ, ಹಿರಿಯ ಉಪಾಧ್ಯಕ್ಷರಾದ ಎಂ.ವಿ. ರುದ್ರಪ್ಪ, ಎಸ್. ಬಸವರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ.ಸಿದ್ಧಬಸಪ್ಪ ಹಾಗೂ ಪದಾಧಿಕಾರಿಗಳು. ಬಿ.ಡಬ್ಲ್ಯೂ.ಎಸ್.ಎಸ್.ಬಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ವಿವಿಧ ನಿಗಮ-ಮಂಡಳಿ, ವೃಂದ ಸಂಘಗಳ ಅಧ್ಯಕ್ಷರು ಭಾಗವಹಿಸಿದ್ದರು. ಬಿ.ಬಿ.ಎಂ.ಪಿ, ಬಿಡಬ್ಲ್ಯೂ, ಎಸ್ಎಸ್ ಬಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ವಿವಿಧ ನಿಗಮ ಮಂಡಳಿ, ವೃಂದ ಸಂಘಗಳ ಅಧ್ಯಕ್ಷರು ಭಾಗವಹಿಸಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ಕಡಬ ಅಧ್ಯಕ್ಷರಾದ ವಿಮಲ್ ನೆಲ್ಯಾಡಿ ಇವರು ತಿಳಿಸಿದ್ದರು.