5 ಮತ್ತು 8ನೇ ತರಗತಿಗಳಿಗೆ ಮೌಲ್ಯಾಂಕನ (ಬೋರ್ಡ್) ಪರೀಕ್ಷೆ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿತ್ತು. ಹೈಕೋರ್ಟ್‌ನ ವಿಭಾಗೀಯ ಪೀಠದ ಈ ಆದೇಶವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಯನ್ನು ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ.
ಸೋಮವಾರ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಪೀಠದ ಮುಂದೆ ಈ ವಿಚಾರವನ್ನು ಪ್ರಸ್ತಾಪಿಸಿದ ವಕೀಲರು, ರಾಜ್ಯಮಟ್ಟದ ಬೋರ್ಡ್ ಪರೀಕ್ಷೆಗಳನ್ನು ನಡೆಸುವುದರಿಂದ ಮೌಲ್ಯಮಾಪನ ವಿಧಾನವು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರವು ಪೋಷಕರು ಮತ್ತು ಶಾಲೆಗಳ ಜೊತೆಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಖಾಸಗಿ ಶಾಲೆಗಳ ಸಂಘದ ಪರ ವಕೀಲರು ವಾದಿಸಿದರು.
ಈ ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಮಾರ್ಚ್ 27 ರಂದು ವಿಚಾರಣೆಯನ್ನು ನಡೆಸಲಾಗುವುದು ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ವಕೀಲರು ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿವೆ. ಹೀಗಾಗಿ ಈ ದಿನಾಂಕದ ಮುನ್ನ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ರು.
ಇದಕ್ಕೆ ಪ್ರತಿಕ್ರಯಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು, ಹೈಕೋರ್ಟ್ ಆದೇಶಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮ ಎಂದು ಹೈಕೋರ್ಟ್‌ಗೆ ಗೊತ್ತಿದೆ ಎಂದರು.
ವಾದ ಮುಂದುವರಿಸಿದ ವಕೀಲರು, ನಾವು ನಾಲ್ಕು ಸಾವಿರ ಶಾಲೆಗಳನ್ನು ಪ್ರತಿನಿಧಿಸುತ್ತೇವೆ, ನಮ್ಮ ಅಭಿಪ್ರಾಯ ಕೇಳಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಮಾರ್ಚ್ 27 ರಂದೇ ನಿಮ್ಮ ಅಭಿಪ್ರಾಯ ಕೇಳುತ್ತೇವೆ ಎಂದು ಹೇಳಿ ವಿಚಾರಣೆಯನ್ನು ಮಾರ್ಚ್ 27 ನಡೆಸಲಾಗುವುದು ಎಂದು ತಿಳಿಸಿದರು.