ಮನೆ ಯಜಮಾನಿಗೆ 2 ಸಾವಿರ ಗೃಹ ಲಕ್ಷ್ಮೀ ಯೋಜನೆ ನೀಡಲು 5 ಕಂಡೀಷನ್ಸ್‌

ಶೇರ್ ಮಾಡಿ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮನೆ ಯಜಮಾನಿಗೆ 2000 ರೂಪಾಯಿ ನೀಡುವ ಈ ಯೋಜನೆಗೆ ಪ್ರಮುಖವಾಗಿ 5 ಷರತ್ತುಗಳನ್ನು ಹಾಕಲಾಗಿದೆ. ಜತೆಗೆ ಆನ್‌ಲೈನ್‌ ಅಥವಾ ನೇರವಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಬೆಂಗಳೂರು : ಕಾಂಗ್ರೆಸ್‌ನ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ನೀಡುವ ‘ಗೃಹ ಲಕ್ಷ್ಮೀ’ ಯೋಜನೆ ಜಾರಿಗೆ ಮಾನದಂಡ ನಿಗದಿ ಮಾಡಿ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಆದರೆ, ಪತಿ ಅಥವಾ ಪತ್ನಿ ಇಬ್ಬರಲ್ಲಿ ಒಬ್ಬರು ಆದಾಯ ತೆರಿಗೆ/ಜಿಎಸ್‌ಟಿ ರಿಟರ್ನ್ಸ್‌ ಸಲ್ಲಿಸುತ್ತಿದ್ದರೆ ಅಂಥವರಿಗೆ ಯೋಜನೆ ಅನ್ವಯವಾಗುವುದಿಲ್ಲ ಎಂದು ಪ್ರಮುಖ ಷರತ್ತು ವಿಧಿಸುವ ಮೂಲಕ ಸರಕಾರ ಶಾಕ್‌ ನೀಡಿದೆ.

ಯೋಜನೆ ಫಲಾನುಭವಿಗಳು ಜೂ.15 ರಿಂದ ಜು.15ರೊಳಗೆ ಅರ್ಜಿ ಸಲ್ಲಿಸಬೇಕು. ಸೇವಾಸಿಂಧು ಪೋರ್ಟಲ್‌ ಅಥವಾ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು. ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಫಲಾನುಭವಿ ಬ್ಯಾಂಕ್‌ ಖಾತೆಗೆ ಆಗಸ್ಟ್‌ 15ರಂದು ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗುವುದು.

ಬಾಡಿಗೆದಾರರಿಗೆ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್‌ ಇಲ್ಲಎಂದು ಮಾರ್ಗಸೂಚಿಯಲ್ಲಿ ಹೇಳಿದ್ದ ಸರಕಾರ, ತೀವ್ರ ಆಕ್ರೋಶದ ಬಳಿಕ ಆದೇಶವನ್ನು ಪರಿಷ್ಕರಿಸಿತ್ತು. ಈಗ ‘ಗೃಹ ಲಕ್ಷ್ಮಿ’ ಗ್ಯಾರಂಟಿಯಲ್ಲೂ ಷರತ್ತುಗಳ ಮೂಲಕ ಜನತೆಗೆ ಸರಕಾರ ಶಾಕ್‌ ನೀಡಿದೆ.

ಮೇ 20 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆ ಸೇರಿ 5 ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಈಗ ಆರ್ಥಿಕ ಇಲಾಖೆ ಹಾಗೂ ಯೋಜನಾ ಇಲಾಖೆಗಳೊಂದಿಗೆ ಸಮಾಲೋಚಿಸಿ 2023-24ನೇ ಸಾಲಿನಲ್ಲಿ ಸಚಿವ ಸಂಪುಟದ ಅನುಮೋದನೆ ಪಡೆದು ಯೋಜನೆಗೆ ಅಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

5 ಪ್ರಮುಖ ಕಂಡೀಷನ್ಸ್‌
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.
ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಗೃಹಲಕ್ಷ್ಮೀ ಅರ್ಜಿ ಸಲ್ಲಿಸುವುದೇಕೆ?
ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ತಪ್ಪು ಮಾಹಿತಿ ನೀಡಿದರೆ ಸೂಕ್ತ ಕ್ರಮ ಎಚ್ಚರಿಕೆ
ಯೋಜನೆಗೆ ಅರ್ಜಿ ಸಲ್ಲಿಸುವರಿಗೆ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುತ್ತದೆ. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನ ಮಾಗುತ್ತದೆ. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುತ್ತದೆ. ಜತೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

error: Content is protected !!