ಶಾಲೆಯ ಮೇಲ್ಛಾವಣಿ ಕುಸಿತ; ನಾಲ್ಕು ಮಕ್ಕಳಿಗೆ ಗಾಯ – ಶಿಥಿಲವಾದ ಕೊಠಡಿಗಳಲ್ಲಿ ಮಕ್ಕಳಿಗೆ ಪ್ರವೇಶವಿಲ್ಲ

ಶೇರ್ ಮಾಡಿ

ಧಾರವಾಡ ತಾಲೂಕಿನ ಬೋಗೂರು ಗ್ರಾಮದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ನಾಲ್ಕು ಜನ ಮಕ್ಕಳ ಗಾಯಗೊಂಡ ಬೆನ್ನಲ್ಲೇ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳಲ್ಲಿ ಮಕ್ಕಳನ್ನು ಕೂಡಿಸದಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ. ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಹಾಗೂ ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜ್ಞಾಪನಾಪತ್ರ ನೀಡಿ, ಆದೇಶಿಸಿರುವ ಜಿಲ್ಲಾಧಿಕಾರಿಗಳು, ಮಳೆಗಾಲ ಪ್ರಾರಂಭವಾಗಿರುವುದರಿಂದ ತಮ್ಮ ತಾಲೂಕುಗಳಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಿಂದ, ಬ್ಲಾಕ್ ಮಟ್ಟದ ಸಂಪನ್ಮೂಲ ಅಧಿಕಾರಿಗಳಾದ ಸಿ.ಆರ್.ಪಿ, ಬಿ.ಆರ್.ಪಿ ನೋಡಲ್ ಅಧಿಕಾರಿಗಳಿಂದ ವರದಿ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.

ಶಿಥಿಲಗೊಂಡಿರುವ ಹಾಗೂ ಹಾನಿಗೊಳಗಾದ ಕಟ್ಟಡಗಳಿದ್ದಲ್ಲಿ ಅಂತಹ ಕಟ್ಟಡಗಳಲ್ಲಿ ಯಾವುದೇ ವರ್ಗಗಳನ್ನು ನಡೆಸದಂತೆ ಸಂಬಂಧಿಸಿದ ಮುಖ್ಯ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರಿಗೆ ಸೂಚಿಸಿ, ಅದು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಶಿಥಿಲವಾದ ಹಾಗೂ ಹಾನಿಗೊಳಗಾದ ಕಟ್ಟಡಗಳು ಮರುನಿರ್ಮಾಣ ಮತ್ತು ರಿಪೇರಿ ಆಗುವವರೆಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಾಠ-ಪ್ರವಚನಕ್ಕೆ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ.

Leave a Reply

error: Content is protected !!