ಧರ್ಮಸ್ಥಳ ಕ್ಷೇತ್ರ, ಡಾ|ಹೆಗ್ಗಡೆಯವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ – ತಿಮರೋಡಿಗೆ ಹೈಕೋರ್ಟ್‌ ಸೂಚನೆ

ಶೇರ್ ಮಾಡಿ

ಸೌಜನ್ಯಾ ಕೊಲೆ ಪ್ರಕರಣ ಮುಂದಿಟ್ಟು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವಂತೆ ಸರಕಾರ ಹಾಗೂ ಗೃಹ ಇಲಾಖೆಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.
ಈ ವಿಚಾರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ನಂದೀಶ್‌ ಕುಮಾರ್‌ ಜೈನ್‌ ಸಲ್ಲಿಸಿರುವ ತಕರಾರು ಅರ್ಜಿಯನ್ನು ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಎಸ್‌. ರಾಜಶೇಖರ್‌ ವಾದ ಮಂಡಿಸಿದರು.
ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್‌ ಆಯುಕ್ತರು, ದಕ್ಷಿಣ ಕನ್ನಡ ಎಸ್ಪಿ, ಬಂಟ್ವಾಳ ಡಿವೈಎಸ್ಪಿ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್‌ ಠಾಣಾಧಿಕಾರಿಗಳು, ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ನೋಟಿಸ್‌ ಜಾರಿಗೊಳಿಸಿತು. ಅಲ್ಲದೆ, ಅಧೀನ ನ್ಯಾಯಾಲಯದ ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ನಿರ್ದೇಶನ ನೀಡಿತು. ಕೋರ್ಟ್‌ ಆದೇಶ ಉಲ್ಲಂ ಸಿ ಯಾವುದೇ ಹೇಳಿಕೆ ನೀಡಬಾರದು ಎಂದು ಮಹೇಶ್‌ ಶೆಟ್ಟಿ ಅವರಿಗೆ ಮೌಖೀಕ ಎಚ್ಚರಿಕೆಯನ್ನೂ ನೀಡಿದೆ.
ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ತನಿಖೆಯನ್ನಾದರೂ ನಡೆಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು. ನ್ಯಾಯಾಂಗ ಮತ್ತು ಧರ್ಮಸ್ಥಳದ ಮಂಜುನಾಥ ದೇವಾಲಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡುತ್ತಿರುವ ಮಹೇಶ್‌ ಶೆಟ್ಟಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯ ಮತ್ತು ಅದಕ್ಕೆ ಸೇರಿದ ಸಂಸ್ಥೆಗಳು, ಟ್ರಸ್ಟ್‌ ವಿರುದ್ಧ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ಧಾರೆ. ನ್ಯಾಯಾಂಗ ಮತ್ತು ನ್ಯಾಯಾಧೀಶರ ವಿರುದ್ಧ ನಿಂದನಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪೊಲೀಸ್‌ ಇಲಾಖೆಯ ಬಗ್ಗೆಯೂ ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಹೇಳಿಕೆ ನೀಡುತ್ತಿದ್ದಾರೆ. ಜತೆಗೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

Leave a Reply

error: Content is protected !!