ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಸೌಜನ್ಯ ಹತ್ಯಾ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ವಿ.ಸುನಿಲ್‌ಕುಮಾರ್, ಶಾಸಕರಾದ ಹರೀಶ್ ಪೂಂಜ, ಭರತ್ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಅವರನ್ನು ಒಳಗೊಂಡ ನಿಯೋಗ ಈ ಮನವಿ ಸಲ್ಲಿಸಿದೆ.
ಸೌಜನ್ಯಾ ಪ್ರಕರಣದ ಬಗ್ಗೆ ಮರುತನಿಖೆಗೆ ಅವಕಾಶವಿದ್ದರೆ ಪರಿಶೀಲನೆ ನಡೆಸುತ್ತೇನೆ ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಭೇಟಿ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಅದೇ ರೀತಿ ಸೌಜನ್ಯ ಹೋರಾಟ ಸಮಿತಿ ಮುಖಂಡರೂ ಹೋರಾಟ ನಡೆಸುತ್ತಿದ್ದಾರೆ. ಕೊಲೆಯಾದ ಸೌಜನ್ಯ ಕುಟುಂಬಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ಇದರ ಜತೆಗೆ ಕೆಲ ವ್ಯಕ್ತಿಗಳು, ಕೆಲವು ಶ್ರದ್ಧಾ ಕೇಂದ್ರಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಇದಕ್ಕೆ ಕೊನೆ ಹಾಡಬೇಕಿದ್ದರೆ ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಆಗ್ರಹಿಸಿದೆ.