ನಕಲಿ ದಾಖಲೆಪತ್ರ ಸೃಷ್ಟಿಸುತ್ತಿದ್ದ ‘ಹೆಲ್ಪ್ ಲೈನ್ ಮಂಗಳೂರು’ -ರೋಶನ್‌ ಮಸ್ಕರೇನಸ್‌ ಬಂಧನ

ಶೇರ್ ಮಾಡಿ

ನಕಲಿ ದಾಖಲೆಪತ್ರಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಬಜ್ಜೋಡಿ ಬಿಕರ್ನಕಟ್ಟೆಯ ಬರ್ನಾಡ್‌ ರೋಶನ್‌ ಮಸ್ಕರೇನಸ್‌(41) ಬಂಧಿತ ಆರೋಪಿ. ಈತ ಮಂಗಳೂರು ನಗರದ ಕಂಕನಾಡಿ ಪಂಪ್‌ವೆಲ್‌ನ ಹಳೆ ರಸ್ತೆಯಲ್ಲಿರುವ ವಿಶ್ವಾಸ್‌ ಕ್ರೌನ್‌ ಅಪಾರ್ಟ್‌ಮೆಂಟ್‌ನ ನೆಲ ಅಂತಸ್ತಿನಲ್ಲಿರುವ ಕೊಠಡಿಯೊಂದರಲ್ಲಿ ‘ಹೆಲ್ಪ್ ಲೈನ್ ಮಂಗಳೂರು’ ಎಂಬ ಹೆಸರಿನ ಸಂಸ್ಥೆಯಲ್ಲಿ ಆಧಾರ್‌ ಕಾರ್ಡ್‌, ಪಡಿತರ ಚೀಟಿ, ಅಂಕ ಪ್ರಮಾಣಪತ್ರ, ಜನನ ಪ್ರಮಾಣ ಪತ್ರ ಇತ್ಯಾದಿಗಳ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಅವುಗಳನ್ನು ಬಳಸಿಕೊಂಡು ಇತರೇ ದಾಖಲಾತಿಗಳನ್ನು ಮಾಡಿಕೊಟ್ಟು ಅವುಗಳನ್ನು ನೈಜ ದಾಖಲಾತಿಗಳೆಂದು ನಂಬಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿದ್ದ.

ಆರೋಪಿ ವಿವಿಧ ಹೆಸರಿನಲ್ಲಿ ತಯಾರಿಸಿದ ನಕಲಿ ಆಧಾರ್‌ ಕಾರ್ಡ್‌ಗಳು, ನಕಲಿ ರೇಷನ್‌ ಕಾರ್ಡ್‌, ನಕಲಿ ಉದ್ದಿಮೆ ಪರವಾನಿಗೆ ಪತ್ರ, ನಕಲಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ನಕಲಿ ಜನನ ಪ್ರಮಾಣ ಪತ್ರಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಕಳೆದ 3 ವರ್ಷಗಳಿಂದ ಈತನಿಂದ ನಕಲಿ ದಾಖಲಾತಿಗಳನ್ನು ಪಡೆದುಕೊಂಡವರು ಅವುಗಳನ್ನು ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯಗಳನ್ನು ಪಡೆಯಲು ಮತ್ತು ಸರಕಾರದ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆಯಲು ಉಪಯೋಗಿಸಿಕೊಂಡು ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿ ಸರಕಾರಕ್ಕೆ ಮತ್ತು ಸಾರ್ವಜನಿಕರಿಗೆ ಮೋಸ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ ನಕಲಿ ಪ್ರಮಾಣಪತ್ರಗಳನ್ನು ತಯಾರಿಸಲು ಉಪಯೋಗಿಸುತ್ತಿದ್ದ ಲ್ಯಾಪ್‌ಟಾಪ್‌, ಕಲರ್‌ ಪ್ರಿಂಟರ್‌, ಲ್ಯಾಮಿನೇಟರ್‌ ಮೆಶಿನ್‌, ಬಯೋ ಮೆಟ್ರಿಕ್‌ ಡಿವೈಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸೆನ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ನಕಲಿ ದಾಖಲೆ ಪತ್ರ ತಯಾರಿಸುವ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

Leave a Reply

error: Content is protected !!