ದ.ಕ. ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಗಮನ ಹರಿಸಿದ್ದು, ಗಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದ ನೆಹರೂ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂದೇಶ ನೀಡಿ ಮಾತನಾಡಿದರು. ಜೀವನ ಸಾಗಿಸಲು ತೀವ್ರ ಯಾತನೆ ಪಡುತ್ತಿದ್ದ ಜನ ಸಾಮಾನ್ಯರ ಬದುಕಿನಲ್ಲಿ ಹರ್ಷದ ಹೊನಲು ಹರಿಸುವಲ್ಲಿ ಯಶಸ್ವಿಯಾಗಿದ್ದೇವೆ ಗೃಹಲಕ್ಷ್ಮೀ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 3.44 ಲಕ್ಷ ಫಲಾನುಭವಿಗಳು ನೋಂದಣಿ ಮಾಡಿದ್ದಾರೆ. ಎಲ್ಲ ಫಲಾನುಭವಿಗಳಿಗೂ ಮಾಸಿಕ ಎರಡು ಸಾವಿರ ರೂ. ನೀಡಲಾಗುತ್ತಿದೆ. ತಾಂತ್ರಿಕ ಸಮಸ್ಯೆಗಳಿಂದ ಜಮೆಯಾಗದ ಫಲಾನುಭವಿಗಳ ಸಮಸ್ಯೆ ಬಗೆಹರಿಸಲು ಒತ್ತು ನೀಡಲಾಗುತ್ತಿದೆ ಎಂದರು. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 248 ಲಕ್ಷ ಫಲಾನುಭವಿಗಳಿದ್ದಾರೆ. ಇವರಿಗೆ ನಗದು ವರ್ಗಾವಣೆ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಇದುವರೆಗೂ 17,30 ಕೋಟಿ ರೂಪಾಯಿ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಮೂಲಕ ಬಡವರ ಬಾಳನಲ್ಲಿ ನೆಮ್ಮದಿ ತರಲಾಗಿದೆ. ಸರಕಾರದ ಮತ್ತೊಂದು ಅಭೂತಪೂರ್ವ ಯೋಜನೆ ‘ಶಕ್ತಿ’ ಯೋಜನೆ. ಮಹಿಳೆಯರ ಸ್ವಾವಲಂಬಿ ಮತ್ತು ಘನತೆಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ಮತ್ತು ಪುತ್ತೂರು ಕೆಎಸ್ಸಾರ್ಟಿಸಿ ವಿಭಾಗಗಳ ಘಟಕಗಳಲ್ಲಿ ಇದುವರೆಗೆ 183 ಲಕ್ಷ ಮಹಿಳಾ ಪ್ರಯಾಣಿಕರು ಈ ಯೋಜನೆಯ ಸದುಪಯೋಗ ಪಡೆದು ಉಚಿತವಾಗಿ ಪ್ರಯಾಣಿಸಿದ್ದು, ಒಟ್ಟು 6,072 ಲಕ್ಷ ರೂ. ಆದಾಯ ಬಂದಿದೆ ಎಂದರು. ಬಹು ಗ್ರಾಮ, ಕುಡಿಯುವ ನೀರಿನ ಯೋಜನೆ ಮಂಜೂರಾಗಿದ್ದು, ಕಿನ್ನಿಗೋಳಿ, ಮರವೂರು, ಕರೋಪಾಡಿ, ಸಂಗಬೆಟ್ಟು, ಮಾಣಿ ಸರಪಾಡಿ ಮತ್ತು ನರಿಕೊಂಬು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಂಡಿರುತ್ತವೆ ಎಂದು ಜಿಲ್ಲೆಯ ವಿವಿಧ ಯೋಜನೆಗಳ ಬಗ್ಗೆ ಸಚಿವರು ವಿವರ ನೀಡಿದರು.
ಸಮಾರಂಭದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್, ಮನಪಾ ಮೇಯರ್ ಸುಧೀರ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್, ದ.ಕ. ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಮೊದಲಾದವರು ಉಪಸ್ಥಿತರಿದ್ದರು.