ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿ ಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರೂ. ಮೊತ್ತದ ಕ್ರಿಯಾಯೋಜನೆ ತಯಾರಿಸಬೇಕು. ಈ ವೇಳೆ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಹಾಗೂ ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸಿ ಅನುದಾನ ಹಂಚಿಕೆ ಮಾಡಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.
ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕೆ ಹೆಚ್ಚುವರಿ 40 ಕೋಟಿ ರೂ.:
ವಿದ್ಯಾರ್ಥಿವೇತನಕ್ಕೆ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಕೇಂದ್ರದ ಪಾಲನ್ನೂ ಭರಿಸಲು ತೀರ್ಮಾನಿಸಿದೆ. ಪ್ರಸ್ತುತ 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದ್ದು, ಬಜೆಟ್ಟಲ್ಲಿ 60 ಕೋಟಿ ರು. ನಿಗದಿಯಾಗಿದೆ. ಕೇಂದ್ರದ ಪಾಲನ್ನೂ ಭರಿಸಬೇಕಿರುವ ಹಿನ್ನೆಲೆಯಲ್ಲಿ ಇಲಾಖಾ ಅನುದಾನದ ಮರು ಹಂಚಿ ಮೂಲಕ 40 ಕೋಟಿ ರು. ಹೆಚ್ಚುವರಿ ಹಣವನ್ನೂ ವಿದ್ಯಾರ್ಥಿವೇತನಕ್ಕೆ ಬಳಕೆ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯ ಸೂಚಿಸಿದರು.
ಮುಂದಿನ ವರ್ಷ ಅನುದಾನ ಹೆಚ್ಚಳ:
ಇನ್ನು ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗುತ್ತಿದೆ ಹೀಗಾಗಿ ಮುಂದಿನ ವರ್ಷ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹೆಚ್ಚಿನ ಅನುದಾನ ಒದಗಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ತಿಳಿದುಬಂದಿದೆ. ಈ ವೇಳೆ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹಮ್ಮದ್ ಖಾನ್ ಸೇರಿದಂತೆ ಹಲವರು ಹಾಜರಿದರು.