ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಆರ್‌ಎಸ್‌ಎಸ್ (RSS) ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿ, ನಿರೀಕ್ಷಣಾ ಜಾಮೀನು ಕೊಡಿಸಿದ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾನೂನು ಘಟಕದ ತಾಲೂಕು ಅಧ್ಯಕ್ಷ ಡಿ.ಚಂದ್ರೇಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಭಾಷಣ ಮಾಡಿದ ಆರೋಪದಡಿ ಕಲಂ 354, 294, 509, 506, 295, 298 ಇತ್ಯಾದಿ ಅಡಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕಲ್ಲಡ್ಕ ಪ್ರಭಾಕರ್ ಪರ ವಕೀಲ ಡಿ.ಚಂದ್ರೇಗೌಡ ವಕಾಲತ್ತು ವಹಿಸಿದ್ದರು. ಅವರಿಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಕೊಡಿಸಿದ್ದರು.
ಈ ನಡವಳಿಕೆಯು ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ನಿಯಮ ನಿಬಂಧನೆಗಳಿಗೆ ವಿರುದ್ಧವಾಗಿರುವುದರಿಂದ ಅವರನ್ನು ಶ್ರೀರಂಗಪಟ್ಟಣ ತಾಲೂಕು ಕಾನೂನು ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ ಎಂದು ಕಾನೂನು ಘಟಕದ ಮಂಡ್ಯ ಜಿಲ್ಲಾಧ್ಯಕ್ಷ ಎ.ಎಸ್.ಗೌರಿಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀರಂಗಪಟ್ಟಣ ಸಂಕೀರ್ತನಾ ಯಾತ್ರೆ ಭಾಷಣ ವೇಳೆ ಮುಸ್ಲಿಂ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ ಪ್ರಭಾಕರ್ ಭಟ್ ಮೇಲೆ ಇತ್ತು. ಶ್ರೀರಂಗಪಟ್ಟಣ ಟೌನ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿ ಕೋರ್ಟ್‌ಗೆ ಚಾರ್ಜ್ ಶೀಟ್ ಸಹ ಸಲ್ಲಿಕೆಯಾಗಿತ್ತು.
ಈ ಪ್ರಕರಣ ಸಂಬಂಧ ವಿಚಾರಣೆ ನಡೆದು ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಇಬ್ಬರ ಶ್ಯೂರಿಟಿ ಜೊತೆಗೆ 2 ಲಕ್ಷ ರೂ. ಬಾಂಡ್ ಮೇಲೆ ನಿರೀಕ್ಷಣಾ ಜಾಮೀನು ನೀಡಲಾಗಿದೆ. ವಕೀಲ ಚಂದ್ರೇಗೌಡ, ಕಲ್ಲಡ್ಕ ಪ್ರಭಾಕರ್ ಪರ ವಾದ ಮಂಡಿಸಿದ್ದರು.