ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಶೇರ್ ಮಾಡಿ

ನೆಲ್ಯಾಡಿ: ದ.ಕ ಜಿಲ್ಲೆಯ ಪ್ರಭಾವಿ ನಾಯಕ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕುವೆಟ್ಟು ಗ್ರಾಮ ಕೇದೆ ಸುಬ್ಬ ಪೂಜಾರಿ ಮತ್ತು ದೇವಕಿ ದಂಪತಿಯ ಪ್ರಥಮ ಪುತ್ರನಾಗಿ ಬಂಗೇರರು 15 ಜನವರಿ 1946ರಂದು ಜನಿಸಿದ್ದರು. 1972 ರಲ್ಲಿ ಕುವೆಟ್ಟು ಗ್ರಾಮ ಪಂಚಾಯತ್‌ನ ಚುನಾವಣೆಯಲ್ಲಿ ಅವಿರೋಧವಾಗಿ ಸದಸ್ಯರಾಗಿ ಆಯ್ಕೆಯಾಗಿ ನಂತರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1983 ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾಯಿತರಾಗಿ ಪ್ರಥಮ ಬಾರಿಗೆ ವಿಧಾನ ಸಭೆಯನ್ನು ಪ್ರವೇಶಿಸಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಓರ್ವರಾಗಿದ್ದರು.

ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂದು ವರ್ಗದವರನ್ನು ಅಗಲಿದ್ದಾರೆ.

Leave a Reply

error: Content is protected !!