ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ವಿಧಿವಿಧಾನಗಳನ್ನು ನೆರವೇರಿಸಿದ್ದ ಅರ್ಚಕ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಶನಿವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ರಾಮ ಮಂದಿರದ ಶಂಕುಸ್ಥಾಪನೆಯಲ್ಲಿ ಪಾಲ್ಗೊಂಡಿದ್ದ 121 ವೈದಿಕ ಬ್ರಾಹ್ಮಣರ ನೇತೃತ್ವ ವಹಿಸಿದ್ದ ಕಾಶಿಯ ಪ್ರಧಾನ ಅರ್ಚಕ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಜನವರಿಯಲ್ಲಿ, ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಪೂಜೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ನೇತೃತ್ವದಲ್ಲಿಯೇ ಎಲ್ಲ ಪೂಜೆಗಳು ನೆರವೇರಿದವು. ಪುತ್ರ ಹಾಗೂ ಕುಟುಂಬದ ಇತರ ಸದಸ್ಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ಇದಲ್ಲದೇ 2021ರ ಡಿಸೆಂಬರ್‌ನಲ್ಲಿ ಕಾಶಿ ವಿಶ್ವನಾಥ ಧಾಮದ ಉದ್ಘಾಟನೆಯ ಪೂಜೆಯಲ್ಲಿಯೂ ಪಾಲ್ಗೊಂಡಿದ್ದರು.
ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಅವರ ನಿಧನದ ಕುರಿತು ಅವರ ಕುಟುಂಬ ಸದಸ್ಯರು ದೃಢಪಡಿಸಿದ್ದು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ಬೆಳಿಗ್ಗೆ ನಿಧನಹೊಂದಿದ್ದಾರೆ ಎಂದು ಹೇಳಿದ್ದಾರೆ.
ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಭಾರತೀಯ ಸನಾತನ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಆಳವಾದ ನಂಬಿಕೆಯನ್ನು ಹೊಂದಿದ್ದರು ಮತ್ತು ಅವರು ಯಾವಾಗಲೂ ಜನರಿಗೆ ದೇವರಿಗೆ ಸಮರ್ಪಿತ ಭಾವನೆಯನ್ನು ವಿವರಿಸುತ್ತಿದ್ದರು.
ಜನವರಿ ತಿಂಗಳಲ್ಲಿ ಅಯೋಧ್ಯೆ ರಾಮ ಮಂದಿರದ ಶಂಕುಸ್ಥಾಪನೆಯಲ್ಲಿ ಮುಖ್ಯ ಅರ್ಚಕರ ಪಾತ್ರದ ಜೊತೆಗೆ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನಾ ಪೂಜೆಯಲ್ಲೂ ಭಾಗಿಯಾಗಿದ್ದರು. ಇದಲ್ಲದೆ, ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದಲ್ಲಿ ದೀಕ್ಷಿತರ ಕುಟುಂಬದ ಹಳೆಯ ತಲೆಮಾರಿನವರು ಸಹ ಕೊಡುಗೆ ನೀಡಿದ್ದಾರೆ ಎಂದು ಹೇಳಲಾಗುತ್ತದೆ.
ಲಕ್ಷ್ಮೀಕಾಂತ್ ದೀಕ್ಷಿತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.